ಬೆಂಗಳೂರು/ಮಂಗಳೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯನ್ನು ಅಂತಿಮಗೊಳಿಸಿರುವ ಬಿಜೆಪಿ ಕೋರ್ ಕಮಿಟಿ ಸಭೆ, ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಮತ್ತೊಮ್ಮೆ ಸಭೆ ನಡೆಸಿ ಹೆಸರನ್ನು ಅಂತಿಮಗೊಳಿಸಲು ನಿರ್ಧಾರ ಕೈಗೊಂಡಿದೆ ಎಂದು ಬಿಜೆಪಿ ಆಪ್ತ ಮೂಲಗಳಿಂದ ತಿಳಿದುಬಂದಿದೆ.
ಮಂಗಳೂರಲ್ಲಿ ಗುರುವಾರ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಿತು. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಲಾಯಿತು. ಪ್ರಮುಖವಾಗಿ ಉಪಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚೆ ನಡೆಯಿತು ಎಂದು ತಿಳಿದುಬಂದಿದೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಮಸ್ಕಿ ಉಪಚುನಾವಣೆಯಲ್ಲಿ ಟಿಕೆಟ್ ನೀಡಬೇಕು ಎನ್ನುವ ನಿರ್ಧಾರ ಕೈಗೊಳ್ಳಲಾಯಿತು. ಈ ಸಂಬಂಧ ಮಸ್ಕಿ ಕ್ಷೇತ್ರದ ಪ್ರತಾಪ್ ಗೌಡ ಪಾಟೀಲ್ ಒಬ್ಬರ ಹೆಸರನ್ನು ಮಾತ್ರ ಕಳುಹಿಸಿಕೊಡಬೇಕು ಎನ್ನುವ ನಿರ್ಧಾರ ಕೈಗೊಳ್ಳಲಾಯಿತು. ಕಳೆದ ಬಾರಿಯ ಬಿಜೆಪಿ ಪರಾಜಿತ ಅಭ್ಯರ್ಥಿ ಬಸನಗೌಡ ತುರುವಿಹಾಳ ಅವರ ಮನವೊಲಿಸಿ ಬಿಜೆಪಿಯಲ್ಲಿಯೇ ಉಳಿಸಿಕೊಳ್ಳಬೇಕು. ಇದನ್ನು ಜಿಲ್ಲಾ ಘಟಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ನಿರ್ವಹಿಸಬೇಕು ಎನ್ನುವ ನಿರ್ಣಯ ಕೈಗೊಳ್ಳಲಾಯಿತು.