ಬೆಂಗಳೂರು : ಲಿಂಗಾಯತ ಸಮುದಾಯವನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಿಎಂ, ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ಭಾನುವಾರ ದೂರು ನೀಡಿದೆ.
ಲಿಂಗಾಯತ ಸಿಎಂ ಕುರಿತಾದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಲಿಂಗಾಯತ ಯುವ ವೇದಿಕೆಯ ಕಾನೂನು ಘಟಕ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದು, ಸಿದ್ದರಾಮಯ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ರಾಜಕೀಯ ತಿರುವು ಪಡೆಯುತ್ತಿರುವ ಸಿದ್ದರಾಮಯ್ಯ ಹೇಳಿಕೆ:ಮಾಜಿ ಸಿಎಂ ಸಿದ್ದರಾಮಯ್ಯ ಶನಿವಾರ ಲಿಂಗಾಯತ ಸಿಎಂ ವಿರುದ್ಧ ಹೇಳಿಕೆ ನೀಡಿದ್ದರು. ಈ ಸಂಬಂಧ ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಕ್ಷಮೆ ಯಾಚಿಸುವಂತೆ ಆಗ್ರಹಿಸುತ್ತಿದ್ದಾರೆ. ಇತ್ತ ಲಿಂಗಾಯತ ಸಮುದಾಯದ ಸ್ವಾಮೀಜಿಗಳು ಸಿದ್ದರಾಮಯ್ಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಾನು ಲಿಂಗಾಯತ ಸಮುದಾಯವನ್ನು ನಿಂದಿಸಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಚುನಾವಣೆ ಸಂದರ್ಭ ಸಿದ್ದರಾಮಯ್ಯರ ಈ ಹೇಳಿಕೆ ಇದೀಗ ರಾಜಕೀಯ ತಿರುವು ಪಡೆಯುತ್ತಿದೆ.
ಈ ಸಂಬಂಧ ಬಿಜೆಪಿ ಲಿಂಗಾಯತ ಯುವ ವೇದಿಕೆಯ ಕಾನೂನು ಘಟಕ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದು, ಸಿದ್ದರಾಮಯ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಲಿಂಗಾಯತ ಯುವ ವೇದಿಕೆಯ ಮುಖಂಡ ಬಸವರಾಜ್ ಮಾತನಾಡಿ, ಸಿದ್ದರಾಮಯ್ಯನವರು ವ್ಯಕ್ತಿಯನ್ನ ನಿಂದನೆ ಮಾಡಿಲ್ಲ. ಇಡೀ ಲಿಂಗಾಯತ ಸಮುದಾಯವನ್ನ ನಿಂದಿಸಿದ್ದಾರೆ. ಲಿಂಗಾಯತ ಸಿಎಂ ಭ್ರಷ್ಟಾಚಾರ ಮಾಡಿದ್ದಾರೆ ಅಂತ ಹೇಳಿಕೆ ನೀಡಿರೋದು ಸಮಂಜಸವಲ್ಲ. ನಾವು ಯಾವುದೇ ಪಕ್ಷದ ಪರವಾಗಿ ದೂರು ನೀಡಲು ಬಂದಿಲ್ಲ. ಇಲ್ಲಿ ಲಿಂಗಾಯತ ಸಮುದಾಯವನ್ನ ತೇಜೋವಧೆ ಮಾಡಿದ್ದಾರೆ. ಕೂಡಲೇ ಸಿದ್ದರಾಮಯ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.