ಬೆಂಗಳೂರು :ನಗರದ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ನಡೆಯುತ್ತಿದ್ದು, ಬೆಳಗಾವಿ ಜಿಲ್ಲೆಯಿಂದ ಚರ್ಚೆಯನ್ನು ಕೈಗೆತ್ತಿಕೊಂಡಿದೆ. ಎರಡು ದಿನಗಳ ಕಾಲ ಅಭ್ಯರ್ಥಿಗಳ ಆಯ್ಕೆ ಕುರಿತು ರಾಜ್ಯ ಸಮಿತಿಯ ಅಂತಿಮ ಸುತ್ತಿನ ಚರ್ಚೆ ನಡೆಯುತ್ತಿದ್ದು, ಯಾವುದೇ ಗೊಂದಲವಿಲ್ಲದೆ ಒಮ್ಮತದಿಂದ ಹೈಕಮಾಂಡ್ ಗೆ ಪಟ್ಟಿಯನ್ನು ಕಳುಹಿಸಿಕೊಡಲು ನಿರ್ಧರಿಸಲಾಗಿದೆ.
ನೆಲಮಂಗಲ ಸಮೀಪದ ಮಾದನಾಯಕನಹಳ್ಳಿಯಲ್ಲಿರುವ ಗೋಲ್ಡನ್ ಪಾಮ್ಸ್ ರೆಸಾರ್ಟ್ ನಲ್ಲಿ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ. ಮೊದಲು ರಾಜ್ಯ ಚುನಾವಣೆ ನಿರ್ವಹಣಾ ಸಮಿತಿ ಸದಸ್ಯರ ಸಭೆ ನಡೆಸಲಾಯಿತು. ನಂತರ ಚುನಾವಣಾ ಸಮಿತಿ ಸಭೆ ಆರಂಭಿಸಲಾಯಿತು. ಇಂದಿನ ಸಭೆಗೆ ಚುನಾವಣಾ ಸಮಿತಿಯ ಸಭೆಗೆ 22 ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಸಹ ಪ್ರಭಾರಿ ಅಣ್ಣಾಮಲೈ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ ಕೆ ಅರುಣಾ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಿಎಂ ಬೊಮ್ಮಾಯಿ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ್, ಬಿ ಶ್ರೀರಾಮುಲು, ಅಶ್ವಥ್ ನಾರಾಯಣ್, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಲಕ್ಷ್ಮಣ ಸವದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿದ್ದು, ಮೊದಲು ಬೆಳಗಾವಿ ಜಿಲ್ಲೆಯಿಂದಲೇ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲು ಮುಂದಾಗಿದ್ದಾರೆ. ಕ್ರಮ ಸಂಖ್ಯೆಯಾಧಾರಿತವಾಗಿ ಬೆಳಗಾವಿ ಮೊದಲು ಬರಲಿದೆ. ಅಲ್ಲದೆ ಬಿಜೆಪಿ ಟಿಕೆಟ್ ಗಾಗಿ ಬಾರಿ ಪೈಪೋಟಿ ಇರುವ ಜಿಲ್ಲೆಯೂ ಬೆಳಗಾವಿಯಾಗಿದೆ. ಹಾಗಾಗಿ ಬೆಳಗಾವಿ ಜಿಲ್ಲೆಯಿಂದಲೇ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ಆರಂಭಿಸಲಾಗಿದೆ. ನಿನ್ನೆ ಬೆಳಗಾವಿಯಲ್ಲಿ ಸಭೆ ಮಾಡಿ ನಾಯಕರ ಅಭಿಪ್ರಾಯ ಸಂಗ್ರಹ ಮಾಡಿ ಬಂದಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯವನ್ನೂ ಆಲಿಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಬೆಳಗಾವಿ ನಂತರ ಉತ್ತರ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳ ಅಭ್ಯರ್ಥಿಗಳ ಕುರಿತು ಇಂದು ಶಾರ್ಟ್ ಲಿಸ್ಟ್ ನಡೆಸಲಿದ್ದು, ನಾಳೆ ದಕ್ಷಿಣ ಕರ್ನಾಟಕ ಭಾಗದ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ.
ಸಭೆ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ರಾಜ್ಯದ ಒಂದನೇ ಕ್ಷೇತ್ರದಿಂದ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ಶುರು ಮಾಡಿದ್ದೇವೆ. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಚರ್ಚೆ ಮಾಡಲಿದ್ದೇವೆ ಎಂದರು.