ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಇಬ್ಬರನ್ನು ಕಣಕ್ಕಿಳಿಸಲು ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದಿಂದ ಇಬ್ಬರು ಅಭ್ಯರ್ಥಿಗಳು ನಿರಾಯಾಸವಾಗಿ ಗೆಲ್ಲುವ ಅವಕಾಶ ಇದೆ. ಹೀಗಾಗಿ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲ್ಲ. ಈ ಸಂಬಂಧ ಹೈಕಮಾಂಡ್ಗೆ ಹೆಸರುಗಳ ಶಿಫಾರಸು ಪಟ್ಟಿಯನ್ನು ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.
ಮೂವರ ಹೆಸರು ಶಿಫಾರಸು:
ಕೋರ್ ಕಮಿಟಿ ಸಭೆಯಲ್ಲಿ ಮೂವರ ಹೆಸರನ್ನು ಶಿಫಾರಸು ಮಾಡಲಾಗಿದೆ ಎಂದು ಹೇಳಲಾಗಿದೆ. ಪ್ರಭಾಕರ್ ಕೋರೆ, ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿ ಮತ್ತು ಉದ್ಯಮಿ ಪ್ರಕಾಶ್ ಶೆಟ್ಟಿ ಹೆಸರನ್ನು ಶಿಫಾರಸು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇತ್ತ ಉದ್ಯಮಿ ಕೆ.ವಿ.ಕಾಮತ್ ಹೆಸರು ಕೂಡ ಕೇಳಿ ಬರುತ್ತಿದೆ. ಒಂದು ವೇಳೆ ಹೈಕಮಾಂಡ್ ನಾವು ನೀಡಿದ ಹೆಸರು ಬಿಟ್ಟು ಕೆ.ವಿ.ಕಾಮತ್ ಹೆಸರನ್ನು ಅಂತಿಮಗೊಳಿಸಬಹುದು. ಆ ಸಂದರ್ಭದಲ್ಲಿ ಉದ್ಯಮಿ ಪ್ರಕಾಶ್ ಶೆಟ್ಟಿಗೆ ಟಿಕೆಟ್ ಕೈ ತಪ್ಪಬಹುದು ಎನ್ನಲಾಗಿದೆ.
ಮೊದಲ ಹೆಸರಾಗಿ ಪ್ರಭಾಕರ್ ಕೋರೆ ಜೊತೆಗೆ ರಮೇಶ್ ಕತ್ತಿ ಹೆಸರು ಶಿಫಾರಸು ಮಾಡಲಾಗಿದೆ. ಕೋರ್ ಕಮಿಟಿ ಸಭೆಯಲ್ಲಿ ಪ್ರಹ್ಲಾದ್ ಜೋಷಿ, ಸದಾನಂದಗೌಡ ಅವರು ಪ್ರಭಾಕರ್ ಕೋರೆ ಪರ ಬ್ಯಾಟಿಂಗ್ ಮಾಡಿದ್ದಾರೆ ಎನ್ನಲಾಗಿದೆ.
ಇತ್ತ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಿರುವ ಕಾರಣ ಜೆಡಿಎಸ್ನಿಂದ ಹೆಚ್.ಡಿ.ದೇವೇಗೌಡರು ಕಣಕ್ಕಿಳಿದರೆ ಅವರಿಗೆ ಲಾಭವಾಗುವ ಸಾಧ್ಯತೆ ಹೆಚ್ಚಿದೆ.