ಬೆಂಗಳೂರು: ಜೈನ ಮುನಿ ಹತ್ಯೆ ಪ್ರಕರಣ ಮತ್ತು ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣ ಎರಡರ ಸತ್ಯಾಸತ್ಯತೆ ತಿಳಿಯಲು ರಾಜ್ಯ ಬಿಜೆಪಿ ವತಿಯಿಂದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ನೇತೃತ್ವದಲ್ಲಿ ಎರಡು ಪ್ರತ್ಯೇಕ ತಂಡ ರಚನೆ ಮಾಡಲಾಗಿದ್ದು, ಎರಡು ತಂಡಗಳು ಬೆಳಗಾವಿ ಮತ್ತು ಮೈಸೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿವೆ.
ತಂಡಗಳ ರಚನೆ ಕುರಿತು ಮಾಹಿತಿ ನೀಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ, ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆಯನ್ನು ಖಂಡಿಸಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಎರಡು ತಂಡಗಳನ್ನ ರಚನೆ ಮಾಡಿದ್ದು, ಹತ್ಯೆಗೆ ಸಂಬಂಧಿಸಿದಂತೆ ಸತ್ಯಾಸತ್ಯತೆ ಪರಿಶೀಲನೆ ನಡೆಸಲು ಬೆಳಗಾವಿಗೆ ಒಂದು ತಂಡ, ಮೈಸೂರು ಜಿಲ್ಲೆಗೆ ಮತ್ತೊಂದು ತಂಡವನ್ನು ಕಳುಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ಮೊದಲ ತಂಡದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಶ್ವತ್ಥನಾರಾಯಣ, ಮಹೇಶ್ ಟೆಂಗಿನಕಾಯಿ, ಶಾಸಕ ಅಭಯ್ ಪಾಟೀಲ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದೆ ಮಂಗಳ ಸುರೇಶ್ ಅಂಗಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ, ಬೆಳಗಾವಿ ನಗರ ಜಿಲ್ಲಾಧ್ಯಕ್ಷ ಅನಿಲ್ ಬೆನಕೆ, ಚಿಕ್ಕೋಡಿ ಜಿಲ್ಲಾಧ್ಯಕ್ಷ ರಾಜೇಶ್ ನೇರ್ಲಿ, ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್ ಹಾಗೂ ರಾಜ್ಯ ವಕ್ತಾರ ಎಂ.ಬಿ ಜಿರಲಿ ಇರಲಿದ್ದು 11 ಜನರನ್ನೊಳಗೊಂಡ ಮೊದಲ ತಂಡ ಜೈನಮುನಿ ಹತ್ಯೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.