ಬೆಂಗಳೂರು: ತಮಿಳುನಾಡಿನ ತಂಜಾವೂರಿನಲ್ಲಿ ಮತಾಂತರಗೊಳ್ಳುವಂತೆ ಒತ್ತಾಯಿಸುತ್ತಿದ್ದ ಹಾಸ್ಟೆಲ್ ವಾರ್ಡನ್ ಕಿರುಕುಳಕ್ಕೆ ಮನನೊಂದು ಅಪ್ರಾಪ್ತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ನಡೆದಿತ್ತು. ಈ ಘಟನೆ ಕುರಿತು ಸತ್ಯಾಂಶ ಪರಿಶೀಲಿಸಿ ವರದಿ ನೀಡಲು ಬಿಜೆಪಿ ಹೈಕಮಾಂಡ್ ನಾಲ್ವರು ಸದಸ್ಯರ ಸಮಿತಿ ರಚಿಸಿದೆ. ಅದರಲ್ಲಿ ಕರ್ನಾಟಕದಿಂದಲೂ ಒಬ್ಬರಿಗೆ ಅವಕಾಶ ನೀಡಲಾಗಿದೆ.
ಮತಾಂತರಕ್ಕೆ ಒತ್ತಾಯಿಸುತ್ತಿದ್ದ ಘಟನೆಯಿಂದ ವಿಚಲಿತಳಾದ ವಿದ್ಯಾರ್ಥಿನಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಜನವರಿ 9ರಂದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಜನವರಿ 19ರಂದು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ವರದಿ ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ನಾಲ್ವರು ಸದಸ್ಯರ ಸಮಿತಿ ರಚಿಸಿದ್ದಾರೆ.