ಬೆಂಗಳೂರು: ಬಿಜೆಪಿ ಹೈಕಮಾಂಡ್ ಲಿಂಗಾಯತ ಸಮುದಾಯವನ್ನು ಮೂಲೆಗುಂಪು ಮಾಡುತ್ತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ. ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದು ಸತ್ಯ ಅನ್ನಿಸುತ್ತದೆ. ಲಿಂಗಾಯತ ಸಮುದಾಯ ಬಿಟ್ಟು ಬೇರೆ ಸಮುದಾಯಕ್ಕೆ ಮನ್ನಣೆ ಕೊಡಲು ಬಿಜೆಪಿ ತಯಾರಿ ನಡೆಸುತ್ತಿದೆ. ಲಿಂಗಾಯತ ಸಮುದಾಯದ ಪ್ರಬಲ ನಾಯಕ ಯಡಿಯೂರಪ್ಪ ಯಾಕೆ ಸಿಎಂ ಸ್ಥಾನದಿಂದ ಕೆಳಗಿಳಿಸಿದರು. ಯಾಕೆ ಅವರನ್ನು ಸೈಡ್ ಲೈನ್ ಮಾಡಿದ್ದಾರೆ. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಇಳಿಸಿ ಬಸವರಾಜ ಬೊಮ್ಮಾಯಿಯನ್ನು ಸಿಎಂ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದರು.
ಲಿಂಗಾಯತ ಸಮುದಾಯದವನ್ನು ಬಿಜೆಪಿ ಹೈಕಮಾಂಡ್ ಕಡೆಗಣಿಸಿದೆ. ಬಿಜೆಪಿ ಲಿಂಗಾಯತ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ. ಈಗ ಲಕ್ಷ್ಮಣ ಸವದಿ ಅವರಿಗೆ ಟಿಕೆಟ್ ನೀಡಿಲ್ಲ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೊಡುತ್ತಿಲ್ಲ. ಯಡಿಯೂರಪ್ಪ ಅವರನ್ನು ಇಳಿಸಿ ಬೇರೆಯವರನ್ನು ಸಿಎಂ ಮಾಡಲು ಹೊರಟಿದ್ದರು. ಆದರೆ ಬ್ಯಾಕ್ ಫೈರ್ ಆಗುತ್ತದೆ ಎಂಬ ಕಾರಣಕ್ಕೆ ಬೊಮ್ಮಾಯಿ ಅವರನ್ನು ಸಿಎಂ ಮಾಡಿದರು. ಈ ಹಿಂದೆ ಕುಮಾರಸ್ವಾಮಿ ಒಂದು ಹೇಳಿಕೆ ಕೊಟ್ಟಿದ್ದರು. ಇದನ್ನು ನೋಡ್ತಿದ್ರೆ ಅದು ನಿಜ ಅನ್ನಿಸುತ್ತದೆ. ಆ ಹೇಳಿಕೆ ಏನು ಅನ್ನೋದನ್ನು ಕುಮಾರಸ್ವಾಮಿ ಅವರನ್ನೇ ಕೇಳಿ ಎಂದು ಪ್ರತಿಕ್ರಿಯಿಸಿದರು.
ಲಕ್ಷ್ಮಣ್ ಸವದಿ ವಿರುದ್ಧ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಂ.ಬಿ. ಪಾಟೀಲ್, ಸವದಿ ಅವರ ಬಗ್ಗೆ ರಮೇಶ್ ಜಾರಕಿಹೊಳಿ ಹಾಗೆ ಮಾತನಾಡಬಾರದು. ಅವರ ಮೇಲೆ ಅವರೇ ಕಲ್ಲು ಎತ್ತಿ ಹಾಕಿಕೊಳ್ಳುತ್ತಿದ್ದಾರೆ. ಅವರ ಹೇಳಿಕೆಯಿಂದ ಅವರಿಗೆ ನಷ್ಟ ಉಂಟಾಗಲಿದೆ ಎಂದು ತಿರುಗೇಟು ನೀಡಿದರು.