ಬೆಂಗಳೂರು : ಸೋಮವಾರದಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು ,ಜನ ವಿರೋಧಿ ನೀತಿಗಳ ವಿರುದ್ಧ ಜಂಟಿಯಾಗಿ ಹೋರಾಟ ನಡೆಸಲು ಪ್ರತಿಪಕ್ಷದಲ್ಲಿರುವ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಮಹತ್ವದ ನಿರ್ಧಾರ ಕೈಗೊಂಡಿವೆ.
ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರ ಅಪಾರ್ಟ್ಮೆಂಟ್ನಲ್ಲಿ ಮೈತ್ರಿಕೂಟದ ಪಕ್ಷಗಳಾಗಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಭೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಆರ್.ಅಶೋಕ್, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಆಯ್ಕೆ ಪ್ರಮುಖ ನಾಯಕರು ಸಭೆ ನಡೆಸಿದರು.
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಯಾವ ರೀತಿ ಹೋರಾಟ ನಡೆಸಬೇಕು ಎನ್ನುವ ಕುರಿತು ಉಭಯ ಪಕ್ಷಗಳ ನಾಯಕರು ಚರ್ಚಿಸಿದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ವೈಫಲ್ಯ, ಬರ ನಿರ್ವಹಣೆಯಲ್ಲಿ ವಿಫಲವಾಗಿರುವುದು, ಜನ ವಿರೋಧಿ ನೀತಿ ಅನುಸರಿಸುತ್ತಿರುವ, ಗುತ್ತಿಗೆದಾರರಿಂದ ಕಮೀಷನ್ ಪಡೆಯುತ್ತಿರುವ ಆರೋಪ, ಗುತ್ತಿಗೆದಾರರ ಆತ್ಮಹತ್ಯೆ, ಸಾವು ಪ್ರಕರಣಗಳು, ಶಾಸಕರಿಗೆ ಅನುದಾನ ಬಿಡುಗಡೆ ಮಾಡದಿರುವುದು, ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲದಿರುವುದು ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಒಟ್ಟಾಗಿ ರಾಜ್ಯ ಸರ್ಕಾರದ ವಿರುದ್ಧ ಸದನದಲ್ಲಿ ಹೋರಾಟ ನಡೆಸಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ.