ಬೆಂಗಳೂರು : ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯರಾಗಿದ್ದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಆರೋಪಿಯಾಗಿದ್ದು, ಧಾರವಾಡ ಜಿಲ್ಲೆ ಪ್ರವೇಶಿಸಲು ಅನುಮತಿ ನೀಡುವಂತೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ಪೀಠ, ಗುರುವಾರ ಸಿಬಿಐಗೆ ನೊಟೀಸ್ ಜಾರಿ ಮಾಡಿ ವಿಚಾರಣೆಯನ್ನು ಸೆ.7ಕ್ಕೆ ಮುಂದೂಡಿದೆ.
ಕಳೆದ ಜುಲೈ ತಿಂಗಳಲ್ಲಿ ಕೂಡ ವಿನಯ ಕುಲಕರ್ಣಿ, ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಆಯ್ಕೆಯಾಗಿದ್ದು, ಜನರ ಸಮಸ್ಯೆಗಳನ್ನು ಆಲಿಸುವುದು ಮತ್ತು ಕ್ಷೆತ್ರದ ಅಭಿವೃದ್ಧಿ ಕಾರ್ಯಗಳ ಕುರಿತಂತೆ ಗಮನ ಹರಿಸಲು ಧಾರವಾಡ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿ ನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಜಯಂತ್ ಕುಮಾರ್ ಮನವಿಯನ್ನು ತಿರಸ್ಕರಿಸಿದ್ದು, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದರು.
ವಿನಯ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಮೂರನೇ ಷರತ್ತನ್ನು ಪ್ರಾಸಿಕ್ಯೂಷನ್ ಅದರಲ್ಲೂ ಸಾಕ್ಷಿಗಳ ಹಿತಾಸಕ್ತಿ ಕಾಯಲು ಹಾಗೂ ಸಾಕ್ಷಿಗಳ ಹೇಳಿಕೆಯನ್ನು ಈ ನ್ಯಾಯಾಲಯವು ದಾಖಲಿಸಿಕೊಳ್ಳುವವರೆಗೆ ಹಾಗೆ ಮಾಡಲಾಗಿದೆ. ಸಾಕ್ಷಿಗಳು ಧಾರವಾಡದಲ್ಲೇ ನೆಲೆಸಿದ್ದು, ಮೂರನೇ ಷರತ್ತನ್ನು ಸಡಿಲಿಸಿದರೆ ಧಾರವಾಡದಲ್ಲಿ ಕುಲಕರ್ಣಿ ಅವರ ಓಡಾಟವನ್ನು ನಿಯಂತ್ರಿಸಲು ಬೇರೆ ಯಾವುದೇ ಷರತ್ತು ಇರುವುದಿಲ್ಲ.