ಬೆಂಗಳೂರು: ಆಡಳಿತಾರೂಢ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಅಧಿಕಾರ ಸ್ವೀಕಾರ ಮಾಡಿ ಒಂದು ವರ್ಷ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಶುಭ ಕೋರಿದ್ದಾರೆ.
ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಾ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಯಶಸ್ವಿಯಾಗಿ ಪೂರೈಸಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನೆಗಳು. ಸಂಘಟನೆಗೆ ಶಕ್ತಿ, ಕಾರ್ಯಕರ್ತರಿಗೆ ಸ್ಫೂರ್ತಿ ತುಂಬಿ ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯತೆಯಿಂದ ಕೆಲಸ ಮಾಡುತ್ತಿರುವ ನಿಮಗೆ ಶುಭ ಹಾರೈಕೆಗಳು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಪೂರೈಸಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನಪರ ಕಾರ್ಯಗಳನ್ನು ಮನೆ-ಮನೆಗಳಿಗೆ ಮುಟ್ಟಿಸುತ್ತಿರುವ ತಮ್ಮ ನೇತೃತ್ವದಲ್ಲಿ ಪಕ್ಷದ ಸಂಘಟನೆ ಇನ್ನಷ್ಟು ಬಲಿಷ್ಠವಾಗಿ ಜನತೆಗೆ ಮತ್ತಷ್ಟು ಹತ್ತಿರವಾಗಲಿ ಎಂದು ಆಶಿಸುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಸಂಕಷ್ಟದ ಸಮಯದಲ್ಲಿ ಸಂಘಟನೆಯ ಚಟುವಟಿಕೆಗಳನ್ನು ಕ್ರಿಯಾಶೀಲವಾಗಿರಿಸಿ ಕಾರ್ಯಕರ್ತರಲ್ಲಿ ಅದಮ್ಯ ಆತ್ಮ ವಿಶ್ವಾಸ ತುಂಬುತ್ತಿದ್ದೀರಿ. ಜನರ ನಿವೇದನೆ ಹಾಗೂ ಸರ್ಕಾರದ ಸ್ಪಂದನೆಯ ನಡುವೆ ಸಂಪರ್ಕ ಸೇತುವೆಯಾಗಿ ಒಂದು ವರ್ಷ ಯಶಸ್ವಿಯಾಗಿ ಪೂರೈಸಿ ಸಮರ್ಥವಾಗಿ ಪಕ್ಷ ಮುನ್ನಡೆಸಿದ್ದೀರಿ. ನಿಮಗೆ ಆತ್ಮೀಯ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.