ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಅಕ್ಕಿ ವಿಚಾರದಲ್ಲಿ ಆರೋಪ ಪ್ರತ್ಯಾರೋಪ ನಡೆದಿದೆ. ಸಿದ್ದರಾಮಯ್ಯ ಆರೋಪಕ್ಕೆ ರಾಜ್ಯ ಬಿಜೆಪಿ ನಾಯಕರು ಸರಣಿ ಟ್ವೀಟ್ಗಳನ್ನು ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ. ಮಾಜಿ ಸಚಿವ ಆರ್. ಅಶೋಕ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಬೆನ್ನಲ್ಲೇ ಮಾಜಿ ಸಚಿವ ಸುನೀಲ್ ಕುಮಾರ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸಹ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅಕ್ಕಿ ವಿತರಣೆ ತಾರತಮ್ಯ ಆರೋಪವನ್ನು ಟ್ವೀಟ್ ಮೂಲಕ ಟೀಕಿಸಿರುವ ಮಾಜಿ ಸಚಿವ ಸುನೀಲ್ ಕುಮಾರ್, ಸಿದ್ದರಾಮಯ್ಯನವರೇ, ನುಡಿದಂತೆ ನಡೆಯುತ್ತೇವೆ ಎಂದು ಪುಗಸಟ್ಟೆ ಪ್ರಚಾರ ತೆಗೆದುಕೊಂಡು ಈಗ ಕೇಂದ್ರ ಸರ್ಕಾರ ಅಕ್ಕಿ ಕೊಡುವಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಜಾರಿಕೊಳ್ಳುವ ಪ್ರಯತ್ನ ನಡೆಸುತ್ತೀರಾ?. ನೀವು ಮತ ರಾಜಕಾರಣಕ್ಕಾಗಿ ಪ್ರಣಾಳಿಕೆ ಸಿದ್ಧಪಡಿಸುವಾಗ ಕೇಂದ್ರ ಸರ್ಕಾರದ ಜೊತೆ ಚರ್ಚೆ ನಡೆಸಿದ್ದಿರಾ?. ಈ ಹಿಂದೆ ಕೇಂದ್ರ ಸರ್ಕಾರ ರಿಯಾಯಿತಿ ದರದಲ್ಲಿ ಕೊಟ್ಟ ಅಕ್ಕಿಯನ್ನೇ ನಾನು ಉಚಿತವಾಗಿ ಕೊಟ್ಟೆ ಎಂದು ಡೋಂಗಿ ಹೊಡೆದವರು ನೀವಲ್ಲವೇ?. ಈಗ ಕೇಂದ್ರ ಸರ್ಕಾರ ಅಕ್ಕಿ ಕೊಟ್ಟಿಲ್ಲ ಎಂಬ ಸಬೂಬು ಏಕೆ? ಎಂದು ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರ ಕೊಡುತ್ತಿದ್ದ ಐದು ಕೆಜಿ ಅಕ್ಕಿ ಪೂರೈಕೆಯನ್ನು ನಿಲ್ಲಿಸಿಲ್ಲ. ಹೆಚ್ಚುವರಿ ಐದು ಕೆಜಿ ಅಕ್ಕಿ ಕೊಡುತ್ತೇನೆ ಎಂದು ಹೇಳಿದ್ದು ನಿಮ್ಮ ವಾಗ್ದಾನ. ಅದರಂತೆ ನಡೆದುಕೊಳ್ಳಿ. ಅಂಗಳ ಡೊಂಕು ಎಂದು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುವ ಕೀಳು ರಾಜಕಾರಣ ನಿಲ್ಲಿಸಿ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿ ಟ್ವೀಟ್ ಮೂಲಕ ಕಾಂಗ್ರೆಸ್ ಸರ್ಕಾರದ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.