ಬೆಂಗಳೂರು:ಮಾರ್ಚ್ 25ರಂದು ವಾಣಿಜ್ಯನಗರಿ ದಾವಣಗೆರೆಯಲ್ಲಿ ಬಿಜೆಪಿ ಮಹಾ ಸಂಗಮ ಕಾರ್ಯಕ್ರಮ ಹಿನ್ನೆಲೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಚುನಾವಣಾ ಪೂರ್ವದಲ್ಲಿ ಸಮಾವೇಶವನ್ನು ಬೃಹತ್ ಪ್ರಮಾಣದಲ್ಲಿ ನಡೆಸಿ ಯಶಸ್ವಿಗೊಳಿಸುವ ಕುರಿತು ಚರ್ಚಿಸಲಾಯಿತು.
ನಗರದ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ರಾಜ್ಯ ಉಸ್ತುವಾರಿಗಳು ಮತ್ತು ರಾಜ್ಯ ನಾಯಕರ ಮಹತ್ವದ ಸಭೆ ನಡೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ, ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ರಾಷ್ಟ್ರೀಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸಭೆಯಲ್ಲಿ ಭಾಗಿಯಾಗಿದ್ದರು. ಮಾರ್ಚ್ 25 ರಂದು ದಾವಣಗೆರೆಯಲ್ಲಿ ನಡೆಯಲಿರುವ ವಿಜಯ ಸಂಕಲ್ಪ ರಥಯಾತ್ರೆಗಳ ಬೃಹತ್ ಸಮಾರೋಪ ಸಮಾವೇಶದ ಸಿದ್ಧತೆಗಳ ಕುರಿತು ಪೂರ್ವಭಾವಿಯಾಗಿ ಸಭೆ ನಡೆಸಿದರು.
ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು, ಸುಮಾರು 10 ಲಕ್ಷ ಜನ ಸೇರಿಸಲು ಬಿಜೆಪಿ ಯೋಜನೆ ರೂಪಿಸಿದೆ. ಹಾಗಾಗಿ ಸಮಾವೇಶ ಯಶಸ್ವಿಯಾಗುವಂತೆ ಮಾಡುವ ಕಾರ್ಯತಂತ್ರ ಮತ್ತು ಪ್ರಮುಖರಿಗೆ ಜವಾಬ್ದಾರಿ ಹಂಚುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಚುನಾವಣಾ ದಿನಾಂಕ ಘೋಷಣೆಗೂ ಮುನ್ನ ನಡೆಯಲಿರುವ ಬಿಜೆಪಿಯ ಅತಿದೊಡ್ಡ ಕಾರ್ಯಕ್ರಮ ಇದಾಗಿರುವ ಹಿನ್ನೆಲೆಯಲ್ಲಿ ಯಾವುದೇ ಲೋಪದೋಷವಾಗದಂತೆ ಕಾರ್ಯಕ್ರಮ ಆಯೋಜಿಸುವ ಕುರಿತು ಸಮಾಲೋಚನೆ ನಡೆಸಲಾಯಿತು.