ಬೆಂಗಳೂರು:ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ನವದೆಹಲಿಗೆ ತೆರಳುತ್ತಿದ್ದಾರೆ. ಎರಡು ದಿನಗಳ ಕಾಲ ನಡೆಯಲಿರುವ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬೆಳಗ್ಗೆ 11.45ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಪ್ರಯಾಣ ಬೆಳೆಸಲಿರುವ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಮಧ್ಯಾಹ್ನ 2.35ಕ್ಕೆ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ. ನಾಳೆ ರಾತ್ರಿ ಕರ್ನಾಟಕ ಭವನದಲ್ಲೇ ವಾಸ್ತವ್ಯ ಹೂಡಲಿರುವ ಯಡಿಯೂರಪ್ಪ, ಶನಿವಾರ ಹಾಗೂ ಭಾನುವಾರ ದೆಹಲಿಯಲ್ಲಿಯೇ ಇರಲಿದ್ದಾರೆ. ವಾಪಸ್ ಬರುವುದನ್ನು ಕಾಯ್ದಿರಿಸಿದ್ದಾರೆ.
ನಾಳೆ ಶಿವಮೊಗ್ಗ ಹುಬ್ಬಳ್ಳಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಜೆ 5 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ನವದೆಹಲಿಗೆ ಪ್ರಯಾಣಿಸಲಿದ್ದಾರೆ. ಎರಡು ದಿನ ದೆಹಲಿಯಲ್ಲಿಯೇ ವಾಸ್ತವ್ಯ ಹೂಡಲಿದ್ದು ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನಾಳೆ ರಾತ್ರಿಯೇ ಮೊದಲ ಹಂತದ ಸಭೆ ನಡೆಯಲಿದ್ದು, ಏಪ್ರಿಲ್ 8 ರಂದು ಅಧಿಕೃತವಾಗಿ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಂಸದೀಯ ಮಂಡಳಿ ಸದಸ್ಯರು ಭಾಗಿಯಾಗಲಿದ್ದಾರೆ.