ಬೆಂಗಳೂರು: ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾಮಠಕ್ಕೆ ಬಿಜೆಪಿ ನಿಯೋಜಿತ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಶನಿವಾರ ಭೇಟಿ ನೀಡಿ, ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದುಕೊಂಡರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಈಗಾಗಲೇ ಸಿಟಿ ರವಿ ಅವರೊಂದಿಗೆ ಮಾತನಾಡಿದ್ದೇನೆ. ಮಾಜಿ ಸಚಿವ ವಿ.ಸೋಮಣ್ಣ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರೊಂದಿಗೂ ಮಾತನಾಡುತ್ತೇನೆ. ನನ್ನ ಮುಂದಿರುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಕೈ ಬಲಪಡಿಸಬೇಕು ಎನ್ನುವ ಒಂದೇ ಗುರಿ. ಅದಕ್ಕೆ ಎಲ್ಲರೂ ಒಗ್ಗಟ್ಟಾಗಿ ಮುಂದುವರೆಯುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಪಕ್ಷ ಇಷ್ಟು ದೊಡ್ಡ ಜವಾಬ್ದಾರಿಯನ್ನು ನನ್ನ ಹೆಗಲ ಮೇಲೆ ಹಾಕಿರುವ ಸಂದರ್ಭದಲ್ಲಿ ಪರಮ ಪೂಜ್ಯರ ಆಶೀರ್ವಾದ ಬಹಳ ಅತ್ಯಗತ್ಯ. ಹಾಗಾಗಿ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಗಳ ಆಶೀರ್ವಾದ ಪಡೆದುಕೊಂಡು ಹೋಗಲು ಬಂದಿದ್ದೇನೆ. ಬಹಳ ಸಂತೋಷದಿಂದ ಅವರು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಯಾವ ರೀತಿ ಪಕ್ಷ ಸಂಘಟಿಸಿದ್ದಾರೋ ಅದೇ ರೀತಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮವಾಗಿ ಕೆಲಸ ಮಾಡು ಎಂದು ಸಲಹೆ ನೀಡಿ ಆಶೀರ್ವಾದ ಮಾಡಿದ್ದಾರೆ. ಇದರಿಂದಾಗಿ ನನಗೆ ತುಂಬಾ ಸಂತೋಷವಾಯಿತು. ಭಾನುವಾರ ಬೆಳಗ್ಗೆ ಸಿದ್ದಗಂಗಾ ಮಠಕ್ಕೆ ಹೋಗಿ ಶ್ರೀಗಳ ಆಶೀರ್ವಾದ ಪಡೆದು ನಂತರ ಮನೆ ದೇವರಾದ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡುತ್ತೇನೆ ಎಂದರು.
ಇದನ್ನೂ ಓದಿ :ನಾನೇನು ರಾಜಕೀಯ ಸನ್ಯಾಸಿಯಲ್ಲ, ಲೋಕಸಭಾ ಚುನಾವಣೆ ನಂತರ ವೈಯಕ್ತಿಕ ರಾಜಕಾರಣ ಮಾಡುತ್ತೇನೆ: ಸಿ ಟಿ ರವಿ