ಬೆಂಗಳೂರು: ರಾಜ್ಯ ಸರಕಾರದ ನೀತಿಗಳನ್ನು ಖಂಡಿಸಿ ಮತ್ತು 10 ಕೆಜಿ ಅಕ್ಕಿ ವಿತರಿಸಬೇಕು ಎಂದು ಆಗ್ರಹಿಸಿ ರಾಜ್ಯದ 10 ವಿಭಾಗ ಕೇಂದ್ರಗಳಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲು ಸಿದ್ದತೆ ನಡೆಸಿತ್ತು. ಆದರೆ, ವ್ಯಾಪಕವಾಗಿ ಸುರಿದ ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿನ ಬೃಹತ್ ಪ್ರತಿಭಟನೆ ರದ್ದುಪಡಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿತು. ಈ ವೇಳೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ನಗರದ ಮೌರ್ಯ ವೃತ್ತದಲ್ಲಿ ಮಾಜಿ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. 50ಕ್ಕೂ ಹೆಚ್ಚಿನ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ತುಂತುರು ಮಳೆಯಲ್ಲಿಯೇ ರಾಜ್ಯ ಸರ್ಕಾರದ ವಿರುದ್ಧ ಭಿತ್ತಿ ಪತ್ರ ಪ್ರದರ್ಶನ ಮಾಡಿ ಘೋಷಣೆ ಕೂಗಿದರು. ಪ್ರತಿಭಟನೆ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ನಾಯಕರೇ ನಿಮಗೆ ಮಾನ ಮರ್ಯಾದೆ ಇದೆಯಾ..? ಡೋಂಗಿ ರಾಜಕಾರಣ ಮಾಡ್ತೀರಾ..? ಅಕ್ಕಿ ಕೊಡೋದನ್ನು ಮುಂದೆ ಹಾಕಿದರೆ ದುಡ್ಡು ಉಳಿಸಬಹುದು ಎಂಬುದು ಅವರ ಉದ್ದೇಶವಾಗಿದೆ ಎಂದು ಕಿಡಿಕಾರಿದರು.
ಈ ವೇಳೆ ಪ್ರತಿಭಟನಾನಿರತರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಕ್ಕೆ ಆಕ್ರೋಶಗೊಂಡ ಅಶೋಕ್, ಪೊಲೀಸರು ದೌರ್ಜನ್ಯ ಮಾಡುತ್ತಿದ್ದಾರೆ, ಇವರದ್ದು ಗೂಂಡಾ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ನಂತರ ಮಾಜಿ ಡಿಸಿಎಂ ಆರ್.ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದ ಪೊಲೀಸರು ಸ್ಥಳದಿಂದ ಕರೆದೊಯ್ದರು.