ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಜನ ವಿರೋಧಿ ಆಡಳಿತ ನಡೆಸುತ್ತಿದೆ. ನೂರು ದಿನದಲ್ಲೇ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಸೆಪ್ಟೆಂಬರ್ 8 ರಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ನಿನ್ನೆ (ಸೋಮವಾರ), ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸೆ. 8ರಂದು ಬೆಂಗಳೂರು ಸ್ವಾತಂತ್ರ್ಯ ಉದ್ಯಾನವನ ಹಾಗೂ ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ, ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಹಾಗೂ ಜನ ವಿರೋಧಿ ನಿಲುವಿನ ವಿರುದ್ಧ ಪ್ರತಿಭಟನೆಯನ್ನು ನಡೆಸುವ ಬಗ್ಗೆ ಪೂರ್ವ ಸಭೆ ನಡೆಸಲಾಯಿತು.
ಸಭೆ ಬಳಿಕ ಮಾಹಿತಿ ನೀಡಿದ ಮಾಜಿ ಸಚಿವ ಅಶ್ವತ್ಥನಾರಾಯಣ, 'ಸೆ.8 ರಂದು ರಾಜ್ಯದ ಎಲ್ಲಾ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಯಲಿದೆ. ಸರ್ಕಾರ ನೂರು ದಿನ ಪೂರೈಸಿದ ಸಂಭ್ರಮ ಕಾಂಗ್ರೆಸ್ ನಾಯಕರಿಗೆ ಮಾತ್ರವೇ ಹೊರತು ಜನರಿಗಲ್ಲ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಗುತ್ತಿಗೆದಾರರ ಬ್ಲಾಕ್ ಮೇಲ್ ಸೇರಿದಂತೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಹ ಮಾಡಿಲ್ಲ. ಅನಿಯಮಿತ ಪವರ್ ಕಟ್ ಮಾಡುತ್ತಿರುವುದು, ರೈತರ ಆತ್ಮಹತ್ಯೆ ಮಾಡಿಕೊಂಡರು ಪರಿಹಾರ ನೀಡದೆ ಇರುವುದು, ಸರ್ಕಾರದಲ್ಲಿ ಹಿಂದೂ ಕಾರ್ಯಕರ್ತ ಕೊಲೆ ಮಾಡುತ್ತಿರುವುದು ನಡೆಯುತ್ತಿದೆ. ಹೀಗಾಗಿ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟು, ಜನಪರ ಕೆಲಸ ಮಾಡಲು ಈ ಹೋರಾಟ ಹಮ್ಮಿಕೊಂಡಿದ್ದೇವೆ' ಎಂದು ತಿಳಿಸಿದರು.