ಬೆಂಗಳೂರು: ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿರುವ ಆರೋಪ ಎದುರಿಸುತ್ತಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ಹಾಲಸ್ವಾಮಿ ಮಠದ ಜಿ.ಎಂ.ಅಭಿನವಶ್ರೀ ಹಾಲವೀರಪ್ಪಜ್ಜ ಸ್ವಾಮೀಜಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ಪ್ರಕರಣವೇನು?: ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ನನ್ನಿಂದ 5 ಕೋಟಿ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಗಳಾದ ಹಿಂದೂ ಕಾರ್ಯಕರ್ತೆ ಚೈತ್ರಾ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.
ಮೂರನೇ ಆರೋಪಿ ಅಭಿನವಶ್ರೀ ಹಾಲವೀರಪ್ಪಜ್ಜ ಸ್ವಾಮೀಜಿ ಪ್ರಕರಣ ದಾಖಲಾದ ಬಳಿಕ ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ನಂತರ 1.50 ಕೋಟಿ ರೂ ಪಡೆದ ಆರೋಪ ಎದುರಿಸುತ್ತಿರುವ ಸ್ವಾಮೀಜಿಯನ್ನು 2023ರ ಸೆಪ್ಟೆಂಬರ್ 19ರಂದು ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಒಡಿಶಾದ ಕಟಕ್‌ನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದರು. ಇತ್ತೀಚೆಗಷ್ಟೇ ಹಾಲಶ್ರೀ ಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದ್ದ ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಅರ್ಜಿ ತಿರಸ್ಕರಿಸಿತ್ತು.
ಈ ಪ್ರಕರಣದಲ್ಲಿ ಈಗಾಗಲೇ ಆರೋಪಿಗಳಿಂದ ಸಿಸಿಬಿ ಪೊಲೀಸರು ಹಣ ಜಪ್ತಿ ಮಾಡಿದ್ದು, ಹಿರೇಹಡಗಲಿ ಹಾಲಶ್ರೀ ಮಠದಲ್ಲಿ 56 ಲಕ್ಷ ರೂ ಹಾಗೂ ಚೈತ್ರಾ ಅವರಿಂದ 2 ಕೋಟಿ ರೂ., ಚಿನ್ನಾಭರಣ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದರು.
ಇದನ್ನೂ ಓದಿ:ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ ಆರೋಪ: ಹಾಲಶ್ರೀ ಸ್ವಾಮೀಜಿ ಜಾಮೀನು ಅರ್ಜಿ ಆದೇಶ ಅ.16ಕ್ಕೆ ಪ್ರಕಟ