ಬೆಂಗಳೂರು: ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಿಸಿದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಟವೆಲ್ ಹಾಕುತ್ತಿರುವ ಕಾಂಗ್ರೆಸ್ ನಾಯಕರ ಆಸೆ ಈಡೇರಲ್ಲ, ಅದಕ್ಕೆ ನಾವು ಅವಕಾಶವನ್ನೂ ನೀಡಲ್ಲ. ರಾಜ್ಯದಲ್ಲಿ ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಆರ್. ಪೇಟೆ ಮತ್ತು ಸುತ್ತಮುತ್ತ ಪ್ರವಾಸ ಮಾಡಿಕೊಂಡು ಬರುತ್ತೇನೆ, ಕೆ.ಆರ್. ಪೇಟೆಯಲ್ಲಿ ಬಹಳ ಶ್ರಮ ಹಾಕಿ ವಿಜಯೇಂದ್ರನ ಪ್ರಯತ್ನದಿಂದ ನಮ್ಮ ಅಭ್ಯರ್ಥಿ ಗೆದ್ದಿದ್ದಾರೆ. ಈಗ ನಾರಾಯಣ ಗೌಡರು ಜಿಲ್ಲೆಯಲ್ಲಿ ಮೂರ್ನಾಲ್ಕು ಕ್ಷೇತ್ರ ಗೆಲ್ಲುವ ವಾತಾವರಣ ಸೃಷ್ಟಿಸಿದ್ದಾರೆ. ಹೀಗಾಗಿ ಬಹಳ ದೊಡ್ಡ ಪ್ರಮಾಣದಲ್ಲಿ ಇಂದು ಸಭೆ ಆಗುತ್ತಿದ್ದು, ಅದರಲ್ಲಿ ಭಾಗಿಯಾಗುತ್ತಿದ್ದೇನೆ ಎಂದರು.