ಬೆಂಗಳೂರು : ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಳಗ್ಗೆ ಮಾರತ್ತಹಳ್ಳಿಯ ವರ್ತೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಇಳಂಗೋವನ್ ಸೆಂಕತ್ತವಲ್ (43) ಮೃತ ಸವಾರ.
ಮೃತ ಇಳಂಗೋವನ್ ಅವರು ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರು ಮಾರ್ಗವಾಗಿ ತೆರಳುತ್ತಿದ್ದರು. ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿಎಂಟಿಸಿ ವೊಲ್ವೋ ಬಸ್, ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ನೆಲಕ್ಕೆ ಬಿದ್ದ ಇಳಂಗೋವನ್ ತಲೆ ಹಾಗೂ ಮುಖದ ಭಾಗಕ್ಕೆ ಗಾಯಗಳಾಗಿವೆ. ಗಾಯಗೊಂಡಿದ್ದ ಅವರನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಸಾವನ್ನಪ್ಪಿದ್ದಾರೆ. ಈ ಕುರಿತು ಎಚ್ಎಎಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ :ಕುಂದಗೊಳ ಬಳಿ ಸರಣಿ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ
ಕುಂದಗೋಳ ಬಳಿ ಸರಣಿ ಅಪಘಾತ :ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಇತರೆ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಬಳಿ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಹಾಸನ ಜಿಲ್ಲೆಯ ಅರಕಲಕೂಡಿನ ಮಣಿಕಂಠ (26), ಪವನ್ (23), ಚಂದನ್ (31) ಹಾಗೂ ಹರೀಶ್ (34) ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಶಿರಡಿ ಹಾಗೂ ಗೋವಾಕ್ಕೆ ಹೊರಟಿದ್ದ ಕಾರುಗಳ ಮಧ್ಯೆ ಅಪಘಾತ ಸಂಭವಿಸಿದೆ. ಎರಡೂ ಕಾರಿನಲ್ಲಿದ್ದ 7 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಆಗ ಇಬ್ಬರನ್ನು ಆಂಬ್ಯುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದ ನಾಲ್ಕು ಜನರು ರಸ್ತೆ ಪಕ್ಕದಲ್ಲಿ ಮಾತನಾಡುತ್ತ ನಿಂತಿದ್ದರು. ಈ ವೇಳೆ ಹಾವೇರಿ ಕಡೆಯಿಂದ ಬಂದ ಲಾರಿಯು ಅಪಘಾತವಾಗಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಪಕ್ಕದಲ್ಲೇ ನಿಂತಿದ್ದ ನಾಲ್ವರು ತೀವ್ರ ಗಾಯಗೊಂಡು ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.