ಬೆಂಗಳೂರು:ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿದ್ದು, ಎಲ್ಲ ಮಕ್ಕಳಿಗೂ ಒಂದೇ ರೀತಿಯ ಬೋರ್ಡ್ ಪರೀಕ್ಷೆ ನಡೆಸಲು ಅವಕಾಶ ನೀಡಬಾರದು ಎಂದು ಖಾಸಗಿ ಅನುದಾನ ರಹಿತ ಶಾಲೆಗಳು ಹೈಕೋರ್ಟ್ನಲ್ಲಿ ಮನವಿ ಮಾಡಿವೆ. ಐದು ಮತ್ತು ಎಂಟನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಶಿಕ್ಷಣ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಗೊಳಿಸಿದ್ದ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ, ಸರ್ಕಾರ ದ್ವಿ ಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದ್ರ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ನ್ಯಾಯಪೀಠಕ್ಕೆ ಖಾಸಗಿ ಅನುದಾನ ರಹಿತ ಶಾಲೆಗಳ ಪರ ವಕೀಲರು ವಾದ ಮಂಡಿಸಿದ್ದರು.
ಖಾಸಗಿ ಮತ್ತು ಸರ್ಕಾರಿ ಶಾಲೆಗಳ ಬೋಧನಾ ವಿಧಾನ ವಿಭಿನ್ನ:ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ತನ್ನ ಸುತ್ತೋಲೆಯಲ್ಲಿ ಹೇಳಲಾಗಿದೆ. ಆದರೆ, ಈ ಕಲಿಕಾ ಚೇತರಿಕೆ ಪಠ್ಯಕ್ರಮ ಕೇವಲ ಸರ್ಕಾರಿ ಶಾಲೆಗಳಿಗೆ ಮಾತ್ರ ಎಂದೂ ತಿಳಿಸಿದೆ. ಈ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸಲು ಕಷ್ಟ ಸಾಧ್ಯ ಎಂದು ಅವರು ನ್ಯಾಯಪೀಠಕ್ಕೆ ತಿಳಿಸಿದರು.
ಅಲ್ಲದೇ, ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ 40 ಪುಟಗಳ ಇತಿಹಾಸವನ್ನು ವಿವರಿಸಲಾಗಿದೆ. ಆದರೆ, ಸರ್ಕಾರಿ ಪಠ್ಯಕ್ರಮದಲ್ಲಿ 80 ಪುಟಗಳ ಇತಿಹಾಸವಿದೆ. ಜತೆಗೆ, ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿನ ಬೋಧನಾ ವಿಧಾನವೂ ಸಂಪೂರ್ಣ ವಿಭಿನ್ನವಾಗಿದೆ. ಹೀಗಾಗಿ ಎಲ್ಲ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ಅವಕಾಶ ನೀಡಬಾರದು ಎಂದು ವಾದ ಮಂಡಿಸಿದರು.
ಕಲಿಕಾ ಚೇತನಾ ಪಠ್ಯಕ್ರಮ:ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಚೇತನಾ ಪಠ್ಯಕ್ರಮ ಅಳವಡಿಸಿಕೊಳ್ಳಲಾಗಿದೆ. ಆದರೆ, ಖಾಸಗಿ ಶಾಲೆಗಳಲ್ಲಿ ಈ ಪಠ್ಯಕ್ರಮ ಇಲ್ಲ. ಇದರಿಂದ ಎಲ್ಲ ಮಕ್ಕಳಿಗೆ ಒಂದೇ ಮಾದರಿ ಪರೀಕ್ಷೆ ನಡೆಸುವುದಕ್ಕೆ ಸಾಧ್ಯವಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಅಲ್ಲದೇ, ಶಿಕ್ಷಣ ಹಕ್ಕು ಕಾಯಿದೆ ಪ್ರಕಾರ, ರಾಜ್ಯ ಸರ್ಕಾರ ಬೋರ್ಡ್ ಪರೀಕ್ಷೆ ಸೇರಿದಂತೆ ಈ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೂ ಮುನ್ನ ಸಾರ್ವಜನಿಕ ಆಕ್ಷೇಪಣೆಗಳನ್ನು ಸ್ವೀಕರಿಸಬೇಕು ಎಂದು ತಿಳಿಸಲಾಗಿದೆ. ಆದರೆ, ಸರ್ಕಾರ ಯಾವುದೇ ನಿಯಮಗಳನ್ನು ಪಾಲಿಸದೇ ಸುತ್ತೋಲೆ ಹೊರಡಿಸಿದೆ. ಇದೇ ಕಾರಣದಿಂದ ಏಕ ಸದಸ್ಯ ಪೀಠ ಸರ್ಕಾರದ ಸುತ್ತೋಲೆಯನ್ನು ರದ್ದು ಪಡಿಸಿ ಆದೇಶಿಸಿದೆ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಮನವಿ ಮಾಡಿದರು.
ನ್ಯಾಯಪೀಠಕ್ಕೆ ಮನವಿ:ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಅವರು, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಪಡೆದುಕೊಂಡಿರುವುದು ಸರಿಯಿದೆ. ಆದರೆ, ಕಲಿಕಾ ಚೇತರಿಕೆ ಪ್ರತ್ಯೇಕವಲ್ಲ, ಸಾಮಾನ್ಯ ಪಠ್ಯಕ್ರಮದಿಂದಲೇ ಕಲಿಕಾ ಚೇತರಿಗೆ ಪಠ್ಯಕ್ರಮ ಸಿದ್ದಪಡಿಸಲಾಗಿದೆ. ಹೀಗಾಗಿ ಪರೀಕ್ಷೆಗೆ ಅವಕಾಶ ಕಲ್ಪಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ವಿವರವಾದ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚನೆ:ವಾದ ಆಲಿಸಿದ ನ್ಯಾಯಪೀಠ, ಐದು ಮತ್ತು ಎಂಟನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಗೆ ಸಂಬಂಧಿಸಿದಂತೆ ವಿವರವಾದ ಪ್ರಮಾಣ ಪತ್ರ ಸಲ್ಲಿಸಬೇಕು. ಈಗಾಗಲೇ ಸಿದ್ದಪಡಿಸಿರುವ ಪ್ರಶ್ನೆ ಪತ್ರಿಕೆಗಳಲ್ಲಿ ಪಠ್ಯಕ್ರಮದ ಹೊರತಾದ ಪ್ರಶ್ನೆಗಳು ಇವೆಯೇ? ಇಲ್ಲವೇ? ಎಂಬುದರ ಬಗ್ಗೆ ವಿವರವಾದ ಮಾಹಿತಿಯನ್ನು ಪ್ರಮಾಣಪತ್ರದ ಮೂಲಕ ನೀಡಬೇಕು ಎಂದು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.
ಇದನ್ನೂ ಓದಿ:ಮಲ್ಲತ್ತಳ್ಳಿ ಕೆರೆಯಲ್ಲಿ ಯಾವುದೇ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಬಾರದು : ಹೈಕೋರ್ಟ್