ಬೆಂಗಳೂರು: ಅರಸೀಕೆರೆಯಲ್ಲಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಕುಟುಂಬಸ್ಥರಿಗೆ ಸೂಕ್ತ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತರಾಗಿರುವುದು ತೀವ್ರ ದುಃಖದಾಯಕ. ಮೃತರ ಆತ್ಮಗಳಿಗೆ ಶಾಂತಿ ಕೋರುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ. ಜೊತೆಗೆ ಅಪಘಾತದಲದಲ್ಲಿ ಸಾವಿಗೀಡಾದವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಲಾಗುವುದು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಹಾಸನ ಬಳಿ ಭೀಕರ ಅಪಘಾತಕ್ಕೆ 9 ಮಂದಿ ಸಾವು: 5-6 ಕಿಮೀ ಸಾಗಿದ್ರೆ ಮನೆ ಸೇರ್ತಿದ್ದ ಕುಟುಂಬದ ಮೇಲೆ ಜವರಾಯನ ಅಟ್ಟಹಾಸ
ಸೂಕ್ತ ಪರಿಹಾರಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ: ಅರಸೀಕೆರೆ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡುವಂತೆ ಹೆಚ್ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಹಾಸನ ಜಿಲ್ಲೆಯ ಅರಸೀಕೆರೆ ಸಮೀಪದ ಬಾಣಾವರ ಬಳಿ ಕಳೆದ ರಾತ್ರಿ ಹಾಲಿನ ಟ್ಯಾಂಕರ್, ಟಿಟಿ ವಾಹನ, ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮಕ್ಕಳೂ ಸೇರಿ 9 ಜನರು ಧಾರುಣವಾಗಿ ಸಾವನ್ನಪ್ಪಿರುವುದು ನನಗೆ ತೀವ್ರ ದಿಗ್ಭ್ರಮೆ, ಅತೀವ ದುಃಖ ಉಂಟು ಮಾಡಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಮೃತರೆಲ್ಲರೂ ಧರ್ಮಸ್ಥಳ ಸೇರಿ ಕೆಲ ಪುಣ್ಯಕ್ಷೇತ್ರಗಳಿಗೆ ತೆರಳಿ ದೈವದರ್ಶನ ಪಡೆದು ತಮ್ಮ ಸ್ವಗ್ರಾಮಕ್ಕೆ ವಾಪಸಾಗುತ್ತಿದ್ದರು. ಇನ್ನು ಕೆಲ ಕಾಲವಷ್ಟೇ ಕ್ರಮಿಸಿದ್ದಿದ್ದರೆ ಮನೆ ಸೇರಿಕೊಳ್ಳುತ್ತಿದ್ದರು. ಆದರೆ, ಅವರೆಲ್ಲರೂ ಅಪಘಾತದಲ್ಲಿ ಸಾವಿಗೆ ತುತ್ತಾಗಿದ್ದಾರೆ. ಜಿಲ್ಲಾಧಿಕಾರಿಗಳು ಆಸ್ಪತ್ರೆಯಲ್ಲಿರುವ ಮೃತದೇಹಗಳ ಮರಣೋತ್ತರ ಪರೀಕ್ಷೆ ಮುಗಿಸಲು ಕ್ರಮ ವಹಿಸಿ, ತಕ್ಷಣ ಸಂಬಂಧಿಕರಿಗೆ ಹಸ್ತಾಂತರ ಮಾಡಬೇಕು. ಗಾಯಾಳುಗಳಿಗೆ ಉಚಿತ, ಉತ್ತಮ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತರಿಗೆ ರಾಜ್ಯ ಸರ್ಕಾರ ಕೂಡಲೇ ಸೂಕ್ತ ಪರಿಹಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ:ಬ್ರೇಕ್ ಫೇಲ್ ಆಗಿ ಉರುಳಿ ಬಿದ್ದ ಬಸ್... 20 ಮಂದಿ ದಾರುಣ ಸಾವು
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಗಳಿಗೆ ಕರುಣಿಸಲಿ ಹಾಗೂ ಗಾಯಾಳುಗಳೆಲ್ಲರೂ ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.