ದಾವೋಸ್/ಬೆಂಗಳೂರು :ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿತು. ಈ ಕಂಪನಿಯು ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಿದ್ದು, ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯ ನಿರೀಕ್ಷೆ ಇದೆ.
ಮೆಗಾ ಡಾಟಾ ಸೆಂಟರ್ : ಇದಕ್ಕೂ ಮುನ್ನ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಭಾರ್ತಿ ಎಂಟರ್ ಪ್ರೈಸಸ್ನ ಅಧ್ಯಕ್ಷ ಹಾಗೂ ಸಿಇಒ ಸುನಿಲ್ ಭಾರ್ತಿ ಮಿತ್ತಲ್ ಅವರು ರಾಜ್ಯದಲ್ಲಿ ಇನ್ನೊಂದು ಮೆಗಾ ಡಾಟಾ ಸೆಂಟರ್ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದರು. ಇದಕ್ಕೆ ರಾಜ್ಯ ಸರ್ಕಾರವು ಎಲ್ಲ ಅಗತ್ಯ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.