ಬೆಂಗಳೂರು:ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿರುವುದಕ್ಕೆ ದು:ಖವಾಗಿದೆ. ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೂರಿದರು.
ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಇಂದು ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ನವೀಕೃತ ಸಭಾಂಗಣ ಹಾಗೂ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಾನು ಸಿಎಂ ಆಗಿದ್ದಾಗ ಸುಮಾರು ಎರಡು ಸಾವಿರ ಕನ್ನಡ ಹೋರಾಟಗಾರರ ಪ್ರಕರಣಗಳನ್ನು ವಾಪಸ್ ಪಡೆದಿದ್ದೆವು. ನಾಮಪಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು ಎಂದರು.
ಕನ್ನಡದ ಅನುಷ್ಠಾನಕ್ಕೆ ಕಾನೂನು:ನಾವು ಕನ್ನಡದ ಅನುಷ್ಠಾನ ಕಾನೂನು ಜಾರಿಗೊಳಿಸಿದ್ದೆವು. ಸ್ವಾತಂತ್ರ್ಯ ಬಂದು ಎಪ್ಪತೈದು ವರ್ಷಗಳಾಗಿದೆ. ಕನ್ನಡ ನಾಡಿನಲ್ಲಿ ಕನ್ನಡದ ಅನುಷ್ಠಾನಕ್ಕಾಗಿ ಕಾನೂನು ಮಾಡುವ ಅನಿವಾರ್ಯತೆ ಬಂದಿರುವುದು ಬೇಸರದ ಸಂಗತಿ. ಆದರೆ ಈಗ ಕಾನೂನು ಮಾಡದಿದ್ದರೆ ನಮ್ಮ ಮಕ್ಕಳಿಗೆ ಕಷ್ಟವಾಗಲಿದೆ. ಕಾನೂನು ಅನುಷ್ಠಾನ ಮಾಡದಿದ್ದರೆ ಅದು ದುರ್ದೈವ ಎಂದರು.
ಕನ್ನಡ ಅನುಷ್ಠಾನ ಆಗದಿದ್ದರಿಂದ ಕನ್ನಡ ಹೋರಾಟಗಾರರು ಪ್ರತಿಭಟನೆ ಮಾಡುತ್ತಿದ್ದಾರೆ. ಯಾವ ನಾಡಿನಲ್ಲಿ ಕಾನೂನು ಅನುಷ್ಠಾನ ಮಾಡುವ ವ್ಯವಸ್ಥೆ ಇರುತ್ತದೆಯೋ ಅಲ್ಲಿ ಈ ರೀತಿ ಪ್ರತಿಭಟನೆಗಳು ನಡೆಯುವುದಿಲ್ಲ. ಯಾವ ನಾಡಿನಲ್ಲಿ ಕಾನೂನು ಅನುಷ್ಠಾನ ಮಾಡುವುದಿಲ್ಲವೋ ಈ ರೀತಿ ಘಟನೆಗಳೂ ನಡೆಯುತ್ತವೆ ಎಂದು ಅಭಿಪ್ರಾಯಿಸಿದರು.
ಕನ್ನಡದ ಉಳಿವಿಗೆ ಕ.ಸಾ.ಪ ಶ್ರಮ:ಕನ್ನಡದ ಉಳಿವಿಗೆ ಕನ್ನಡ ಸಾಹಿತ್ಯ ಪರಿಷತ್ತು ಸಾಕಷ್ಟು ಶ್ರಮ ಹಾಕಿದೆ. ನಾನು ಮುಖ್ಯಮಂತ್ರಿ ಇದ್ದಾಗ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿಕೃತಗೊಳಿಸುವ ಪ್ರಯತ್ನ ಮಾಡಿದ್ದರು. ಆದರೆ ನಾನು ಸುವರ್ಣ ಸೌಧದ ಮುಂದೆ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಅಂಬೇಡ್ಕರ್ ಹಾಗೂ ಗಾಂಧಿ ಅವರ ಪ್ರತಿಮೆ ನಿಲ್ಲಿಸುವ ಕೆಲಸ ಮಾಡಿದ್ದೇನೆ ಎಂದು ವಿವರಿಸಿದರು.
ಕನ್ನಡ ನಿತ್ಯ ನಿರಂತರ ಆಗಿರಬೇಕೆಂದರೆ ಕನ್ನಡಿಗರು ಜಾಗೃತರಾಗಿರಬೇಕು. ಜಗತ್ತು ಬದಲಾಗುತ್ತಿದೆ. ಸವಾಲುಗಳನ್ನು ಎದುರಿಸಲು ನಮ್ಮ ಮಕ್ಕಳನ್ನು ಸಿದ್ದಪಡಿಸಬೇಕಿದೆ. ಇಲ್ಲಿ ಐಟಿ, ಬಿಟಿ ಯಾಕೆ ಅಭಿವೃದ್ಧಿ ಆಗಿದೆಯೆಂದರೆ ಇಲ್ಲಿನ ಮಕ್ಕಳು ಜ್ಞಾನವಂತರಿದ್ದಾರೆ. ಸಾಧನೆ ಮಾಡಿದ್ದಾರೆ. ಅದೇ ಕಾರಣಕ್ಕೆ ಐಟಿ, ಬಿಟಿಯವರು ಇಲ್ಲಿಗೆ ಬಂದಿದ್ದಾರೆ ಎಂದರು.
ಇದನ್ನೂ ಓದಿ:'ಯತ್ನಾಳ್ ಉಚ್ಛಾಟಿಸುವ ಕೆಲಸಕ್ಕೆ ಕೈ ಹಾಕಿದರೆ..': ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ