ಕರ್ನಾಟಕ

karnataka

ETV Bharat / state

ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ ಇಟ್ಟು 'ವಿಕೃತ ಕೇಕೆ' ಹಾಕುತ್ತಿವೆ : ಹೆಚ್​​ಡಿಕೆ ಕಿಡಿ

ಸತ್ಯವೇನೆಂಬುದು ಜನರಿಗೆ ಗೊತ್ತಾಗಬೇಕು. ಸಾವಿನ ಮನೆಯಲ್ಲಿ ಮತ ಫಸಲು ತೆಗೆಯುವ ನಿರ್ಲಜ್ಜ ನಡೆ ಅಸಹನೀಯ. ಶಾಂತಿಯನ್ನು ಕದಡಿದ ಪಾಪ ಸುಮ್ಮನೆ ಬಿಡುವುದಿಲ್ಲ. ಹಚ್ಚ ಹಸಿರಿನ ನಿರ್ಮಲ ಮಲೆನಾಡಿನಲ್ಲಿ ಹೊತ್ತಿ ಉರಿಯುತ್ತಿರುವ ದ್ವೇಷದಳ್ಳುರಿ ಇಡೀ ರಾಜ್ಯಕ್ಕೇ ಶಾಪವಾಗಿ ಪರಿಣಮಿಸಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ..

Former chief minister H.D. Kumaraswamy sparked against BJP-Congress
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

By

Published : Feb 23, 2022, 12:05 PM IST

ಬೆಂಗಳೂರು :ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ ಸೆಳೆದು ಕೃತಾರ್ಥವಾಗುತ್ತಿದೆ.

ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ ಇಟ್ಟು 'ವಿಕೃತ ಕೇಕೆʼ ಹಾಕುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಸಂಘರ್ಷದ ವಾತಾವರಣ ಸೃಷ್ಟಿಸಿ ಮಕ್ಕಳಲ್ಲಿ ದ್ವೇಷದ ವಿಷವುಕ್ಕಿಸಲಾಗುತ್ತಿದೆ.

ಎರಡು ವರ್ಷದಿಂದ ಕೋವಿಡ್‌ ಹೊಡೆತಕ್ಕೆ ಮಲಗಿರುವ ವಿದ್ಯಾರಂಗವನ್ನು ಸರ್ವನಾಶ ಮಾಡುವ ಹುನ್ನಾರವಷ್ಟೇ ಇದು. ಬಡವರ ಮಕ್ಕಳು ಓದಿ ವಿದ್ಯಾವಂತರಾಗಬಾರದೇ? ಎಂದು ಪ್ರಶ್ನಿಸಿದ್ದಾರೆ.

ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯಾದ್ಯಂತ 'ರಾಜಕೀಯ ಕೊರೊನಾ'ವನ್ನು ಹಬ್ಬಿಸುತ್ತಿವೆ. ಆ ಮೂಲಕ ಜನರ ಮನಸ್ಸುಗಳನ್ನು ಹಾಳು ಮಾಡುತ್ತಿವೆ. ಈ ಮಹಾಮಾರಿಗೆ ಲಸಿಕೆ ಇಲ್ಲ. ಜನರು ಈ ಹುನ್ನಾರವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದಿದ್ದಾರೆ.

ಅಧಿಕೃತ ಪ್ರತಿಪಕ್ಷದ ಸ್ವಪ್ರತಿಷ್ಠೆ, ಆಡಳಿತ ಪಕ್ಷದ ಅಸಮರ್ಥತೆಗೆ ವಿಧಾನಸಭಾ ಕಲಾಪ ಆಪೋಶನವಾಯಿತು. 'ನಾನು ಹೊಡೆದಂಗೆ ಮಾಡುತ್ತೇನೆ, ನೀನು ಅತ್ತಂಗೆ ಮಾಡು' ಎನ್ನುವಂತೆ ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಕುಮ್ಮಕ್ಕಾಗಿ 'ಕಲಾಪಕ್ಕೆ ಕುಣಿಕೆ' ಬಿಗಿದು ಜನರ ಆಶೋತ್ತರಗಳನ್ನು ಸದನದಲ್ಲೇ ಸಮಾಧಿ ಮಾಡಿದವು ಎಂದು ಟೀಕಿಸಿದ್ದಾರೆ.

ನಿಗದಿತ ವೇಳಾಪಟ್ಟಿಗಿಂತ 3 ದಿನ ಮೊದಲೇ ಮುಗಿದ ಅಧಿವೇಶನದಲ್ಲಿ ಆರೂವರೆ ಕೋಟಿ ಕನ್ನಡಿಗರಿಗೆ ಸೊನ್ನೆ ಸುತ್ತಲಾಗಿದೆ. ಜನಪ್ರತಿನಿಧಿಗಳ ಕೇವಲ ಟಿಎ-ಡಿಎಗಾಗಿ ಮತ್ತು ವೇತನ, ಭತ್ಯೆ ಏರಿಸಿಕೊಳ್ಳಲಷ್ಟೇ ಅಧಿವೇಶನ ನಡೆದಿದೆ. ಜನರು ಏನೆಂದುಕೊಂಡಾರು? ಎಂಬ ಕನಿಷ್ಠ ಭಯವೂ ಇಲ್ಲದೆ ಆತ್ಮವಂಚನೆಯ ಪರಾಕಾಷ್ಠೆ ಇದು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗ ಕೊಲೆ ಪ್ರಕರಣ.. ಪೊಲೀಸ್ ತನಿಖೆಯ ಮಾಹಿತಿ ಆಧರಿಸಿ ಬೇರೆ ಸಂಸ್ಥೆಗೆ ವಹಿಸುವ ನಿರ್ಧಾರ : ಸಿಎಂ

ಹಿಜಾಬ್, ಕೇಸರಿ ಶಾಲು ಮತ್ತು ಶಿವಮೊಗ್ಗದಲ್ಲಿ ನಡೆದ ಯುವಕನ ಕೊಲೆ.. ಇವೆಲ್ಲಾ ಯಾರಿಂದ ಯಾರಿಗಾಗಿ ನಡೆಯುತ್ತಿವೆ? ಈ ಟೂಲ್ ಕಿಟ್ ರೂವಾರಿಗಳು ಯಾರು? ಅಧಿವೇಶನವನ್ನು ಹಳ್ಳ ಹಿಡಿಸಿದ್ದಕ್ಕೂ ಈ ಎಲ್ಲಾ ಪ್ರತಿಗಾಮಿ ಘಟನೆಗಳಿಗೆ ಸಂಬಂಧ ಇದೆ ಎನ್ನುವ ಅನುಮಾನ ನನ್ನದು.

ಸತ್ಯವೇನೆಂಬುದು ಜನರಿಗೆ ಗೊತ್ತಾಗಬೇಕು. ಸಾವಿನ ಮನೆಯಲ್ಲಿ ಮತ ಫಸಲು ತೆಗೆಯುವ ನಿರ್ಲಜ್ಜ ನಡೆ ಅಸಹನೀಯ. ಶಾಂತಿಯನ್ನು ಕದಡಿದ ಪಾಪ ಸುಮ್ಮನೆ ಬಿಡುವುದಿಲ್ಲ. ಹಚ್ಚ ಹಸಿರಿನ ನಿರ್ಮಲ ಮಲೆನಾಡಿನಲ್ಲಿ ಹೊತ್ತಿ ಉರಿಯುತ್ತಿರುವ ದ್ವೇಷದಳ್ಳುರಿ ಇಡೀ ರಾಜ್ಯಕ್ಕೇ ಶಾಪವಾಗಿ ಪರಿಣಮಿಸಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಬೇಕು. ಅವರು ಯಾರ ಕೈಗೊಂಬೆಯೂ ಆಗಬಾರದು ಎಂದು ನಾನು ಮತ್ತೊಮ್ಮೆ ಆಗ್ರಹಿಸುತ್ತಿದ್ದೇನೆ. ಶಾಂತಿ-ಭದ್ರತೆ ನಿರ್ವಹಣೆಯಲ್ಲಿ ವಿಫಲವಾಗಿರುವ ಸರ್ಕಾರಕ್ಕೆ ರಾಜ್ಯಪಾಲರು ಕಿವಿ ಹಿಂಡಲೇಬೇಕು ಎಂದು ಹೆಚ್​​ಡಿಕೆ ಆಗ್ರಹಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details