ಬೆಂಗಳೂರು :ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಂದು ಸಂಜೆ ಉಪಹಾರ ಕೂಟ ಏರ್ಪಡಿಸಲಾಗಿತ್ತು. ಪ್ರಶಸ್ತಿ ಸ್ವೀಕರಿಸುವ ಮುನ್ನ ಎಲ್ಲಾ ಪುರಸ್ಕೃತರು ಮೂರು ಬಸ್‌ಗಳಲ್ಲಿ ವಿಧಾನಸೌಧಕ್ಕೆ ಆಗಮಿಸಿದರು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ವಿಧಾನಸೌಧದಲ್ಲಿ ಉಪಹಾರ ಕೂಟ ಅದಮ್ಯ ಚೇತನ ಸಂಸ್ಥೆಯ ತೇಜಸ್ವಿನಿ ಅನಂತಕುಮಾರ್, ರಂಗಕರ್ಮಿ, ನಟ ಪ್ರಕಾಶ್ ಬೆಳವಾಡಿ ಸೇರಿದಂತೆ ಎಲ್ಲಾ ಪುರಸ್ಕೃತರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಸ್ವಾಗತಿಸಿದರು. ಎಲ್ಲಾ ಗಣ್ಯರು ಉಪಹಾರ ಸೇವಿಸಿದರು. ಅಷ್ಟರಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದರು.
ಪ್ರತಿಯೊಬ್ಬರ ಬಳಿಯೂ ತೆರಳಿ ಮಾತನಾಡಿಸಿ ಶುಭ ಹಾರಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಸುನೀಲ್ ಕುಮಾರ್, ಬಿ.ಸಿ.ನಾಗೇಶ್, ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಟ ದೇವರಾಜ್, ರೋಹನ್ ಬೋಪಣ್ಣ ಸೇರಿದಂತೆ ಕೆಲವರು ಪುರಸ್ಕೃತರು ಉಪಹಾರ ಕೂಟದಲ್ಲಿ ಭಾಗವಹಿಸಿರಲಿಲ್ಲ. ಉಪಹಾರ ಕೂಟ ಮುಗಿದ ನಂತರ ಎಲ್ಲಾ ಪುರಸ್ಕೃತರು ಬಸ್‌ಗಳಲ್ಲಿ ರವೀಂದ್ರ ಕಲಾಕ್ಷೇತ್ರಕ್ಕೆ ತೆರಳಿದರು.
2021ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆಯುತ್ತಿರುವ ಕಾರ್ಯಕ್ರಮದಲ್ಲಿ 66 ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತದೆ.