ಬೆಂಗಳೂರು:ರಾಜ್ಯ ಬಿಜೆಪಿಯ ಅಗ್ರ ನಾಯಕ ಬಿ.ಎಸ್.ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ನವದೆಹಲಿಗೆ ತೆರಳುತ್ತಿದ್ದು ಮತ್ತೊಮ್ಮೆ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಆಸೆ ಗರಿಗೆದರಿದೆ. ಈ ಬಾರಿಯಾದರೂ ಸಂಪುಟದಲ್ಲಿ ಅವಕಾಶ ಸಿಗಲಿದೆಯಾ ಎನ್ನುವ ನಿರೀಕ್ಷೆಯೊಂದಿಗೆ ನಾಯಕರ ದೆಹಲಿ ಪ್ರವಾಸವನ್ನೇ ಎದುರು ನೋಡುತ್ತಿದ್ದಾರೆ.
ಬಿಎಸ್ವೈ ಮತ್ತು ಬೊಮ್ಮಾಯಿ ದೆಹಲಿ ಪ್ರವಾಸ :ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಲು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಪ್ರತ್ಯೇಕವಾಗಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ದೆಹಲಿಯ ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆಯಲ್ಲಿ ಸೋಮವಾರ ಮತ್ತು ಮಂಗಳವಾರ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಗರಿಗೆದರಿದ ಸಚಿವ ಸಂಪುಟ ವಿಸ್ತರಣೆ :ಧಾರವಾಡ ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿ ಹುಬ್ಬಳ್ಳಿಯಿಂದ ದೆಹಲಿಗೆ ತೆರಳಲಿದ್ದರೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ. ಎರಡು ದಿನಗಳ ಕಾಲ ನಡೆಯಲಿರುವ ಸಭೆಯಲ್ಲಿ ಪಾಲ್ಗೊಂಡ ನಂತರ ಇಬ್ಬರೂ ಪ್ರತ್ಯೇಕವಾಗಿ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಈ ವರ್ಷ ಕರ್ನಾಟಕ ಸೇರಿ ಒಂಭತ್ತು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೊದಲಿಗೆ ಕರ್ನಾಟಕದ ಸರತಿ ಶುರುವಾಗಲಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಈ ಸಭೆ ಕರ್ನಾಟಕದ ಮಟ್ಟಿಗೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ಚುನಾವಣೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ಸಾಧ್ಯತೆ : ರಣತಂತ್ರದ ಭಾಗವಾಗಿ ರಾಜ್ಯದಲ್ಲಿ ಕೈಗೆತ್ತಿಕೊಂಡಿರುವ ಸರ್ಕಾರದ ಸಾಧನೆ ತಿಳಿಸುವ ಜನಸಂಕಲ್ಪ ಯಾತ್ರೆ ಸಾಧನೆ, ಫಲ, ಡಬಲ್ ಇಂಜಿನ್ ಸರ್ಕಾರದ ಪ್ರಯೋಜನಗಳ ಬಗ್ಗೆ ಪರಿಣಾಮಕಾರಿಯಾಗಿ ಬಿಂಬಿಸಲು ಮಾಡಿದ ಪ್ರಯತ್ನ, ಸಂಘಟನೆ ಬಲವರ್ಧನೆ ಚಟುವಟಿಕೆಗಳ ಪ್ರಗತಿ ಪರಾಮರ್ಶೆಯಾಗಲಿದೆ. ರಾಜ್ಯಕ್ಕೆ ಪ್ರತ್ಯೇಕವಾಗಿ ಹೆಣೆಯಬೇಕಾದ ಚುನಾವಣಾ ತಂತ್ರಗಾರಿಕೆ ಕುರಿತು ಚರ್ಚೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಕರ್ನಾಟಕದವರೇ ಆದ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಪಕ್ಷದ ರಾಜ್ಯಾಧ್ಯಕ್ಷ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಈ ಸಭೆಯಲ್ಲಿ ಪಾಲ್ಗೊಳ್ಳುವರು.