ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಅಕ್ರಮ ಡಿನೋಟಿಫಿಕೇಶನ್ ಆರೋಪ ಪ್ರಕರಣ ಸಂಬಂಧ ವಾಸುದೇವರೆಡ್ಡಿ ಸಲ್ಲಿಸಿದ್ದ ದೂರನ್ನ ರದ್ದು ಮಾಡಬೇಕೆಂದು ಸಲ್ಲಿಸಿದ ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ್‌ಕುಮಾರ್ ಅವರಿದ್ದ ಪೀಠದಲ್ಲಿ ನಡೆಯಿತು.
ಈ ಕುರಿತು ಅರ್ಜಿದಾರರ ಪರ ವಾದಿಸಿದ ವಕೀಲ ಸಂದೀಪ್ ಎಸ್. ಪಾಟೀಲ್ ಅವರು ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಅಕ್ರಮ ಡಿನೋಟಿಫಿಕೇಶನ್ ಪ್ರಕರಣದ ವಿಚಾರಣೆ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಇದಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಬೇಕೆಂದು ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಯಡಿಯೂರಪ್ಪ ವಿರುದ್ಧ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡಿ ವಿಚಾರಣೆಯನ್ನು ಮುಂದೂಡಿತು.
ಪ್ರಕರಣ ಹಿನ್ನೆಲೆ:
ನಗರದ ವೈಟ್ ಫೀಲ್ಡ್ ಮತ್ತು ಎಲೆಕ್ಟ್ರಾನಿಕ್ ಸಿಟಿಯ ಜಾಗವನ್ನು ರಾಜ್ಯ ಸರ್ಕಾರ 2000-2001ರಲ್ಲಿ ಐಟಿ ಕಾರಿಡಾರ್ ಎಂದು ಘೋಷಿಸಿತ್ತು. ಈ ನಿಟ್ಟಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮಾರತ್‌ಹಳ್ಳಿ, ಬೆಳ್ಳಂದೂರು, ಸರ್ಜಾಪುರ, ದೇವರಬೀಸನಹಳ್ಳಿ, ಕಾಡುಬೀಸನಹಳ್ಳಿ, ಕರಿಯಮ್ಮನ ಅಗ್ರಹಾರ ಸೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿನ 434 ಎಕರೆ ಪ್ರದೇಶದ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿತ್ತು. ಕೆಐಎಡಿಬಿ ವಶಪಡಿಸಿಕೊಂಡಿದ್ದ ದೇವರಬೀಸನಹಳ್ಳಿಯ ಸರ್ವೇ ನಂ 49ರ 4.30 ಎಕರೆ, ಬೆಳ್ಳಂದೂರು ಗ್ರಾಮದ ಸರ್ವೇ ನಂ 46/1ರ 1.17 ಎಕರೆ, ಸರ್ವೇ ನಂ 18ರ 1.10ಎಕರೆ, ಸರ್ವೇ ನಂ 10ರ 33 ಗುಂಟೆಯನ್ನು ಡಿನೋಟಿಫೈ ಮಾಡಲು ಉಪ ಮುಖ್ಯಮಂತ್ರಿಯಾಗಿದ್ದ ಬಿಎಸ್‌ವೈ ಆದೇಶಿಸಿದ್ದು ಅಕ್ರಮವಾಗಿದೆ ಎಂದು ಆರೋಪಿಸಿ ವಾಸುದೇವರೆಡ್ಡಿ ಎಂಬುವರು 2013ರ ಜುಲೈ 10ರಂದು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ದೂರಿನ ಕುರಿತಂತೆ ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯವು 2015ರ ಫೆ.18ರಂದು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು. ವಿಚಾರಣೆಗೆ ತಡೆ ನೀಡಬೇಕು ಮತ್ತು ಎಫ್‌ಐಆರ್ ರದ್ದುಗೊಳಿಸಬೇಕೆಂದು ಕೋರಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ರು.