ಬೆಂಗಳೂರು:ರಾಜ್ಯ ವಿಧಾನ ಮಂಡಲ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಪ್ರಮುಖ ವಿಧೇಯಕಗಳು ಮಂಡನೆಯಾಗಲಿವೆ.
ಇಂದಿನಿಂದ ಬಜೆಟ್ ಅಧಿವೇಶನ: ಸರ್ಕಾರದ ತರಾಟೆಗೆ ರೆಡಿಯಾದ ಪ್ರತಿಪಕ್ಷಗಳು - Budget Session of the Assembly from today
ರಾಜ್ಯ ವಿಧಾನ ಮಂಡಲ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಪ್ರಮುಖ ವಿಧೇಯಕಗಳು ಮಂಡನೆಯಾಗಲಿವೆ. ಹೆಚ್.ಎಸ್.ದೊರೆಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜೀನಾಮೆ, ಇಲ್ಲವೇ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಆಗ್ರಹಿಸಿ ಸದನದಲ್ಲಿ ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಒಟ್ಟು ಎಂಟು ವಿಧೇಯಕಗಳ ಮಂಡನೆ ಇಂದು ಆಗಲಿದೆ. ಇದರಲ್ಲಿ ನಾಲ್ಕು ವಿಧೇಯಕಗಳನ್ನು ಸಿಎಂ ಯಡಿಯೂರಪ್ಪ ಮಂಡಿಸಲಿದ್ದಾರೆ. ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ತಿದ್ದುಪಡಿ ವಿಧೇಯಕ, ಪುರಸಭೆಗಳು ಮತ್ತು ಇತರ ಕಾನೂನು ತಿದ್ದುಪಡಿ ವಿಧೇಯಕ, ಬಹಿರಂಗ ಸ್ಥಳ ವಿರೂಪಗೊಳಿಸುವುದನ್ನು ಪ್ರತಿಬಂಧಿಸುವ ತಿದ್ದುಪಡಿ ವಿಧೇಯಕ, ರೇಸ್ ಕೋರ್ಸ್ಗಳಿಗೆ ಪರವಾನಗಿ ನೀಡುವ ತಿದ್ದುಪಡಿ ವಿಧೇಯಕ, ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ವೇತನ ಮತ್ತು ನಿವೃತ್ತಿ ವೇತನ ನಿಯಂತ್ರಣ ವಿಧೇಯಕ, ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ವಿಧೇಯಕ, ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಗಳ ಮಂಡನೆ ಆಗಲಿದೆ.
ಸರ್ಕಾರಕ್ಕೆ ಸವಾಲಾದ ಯತ್ನಾಳ್ ಹೇಳಿಕೆ: ವಿಧಾನ ಮಂಡಲ ಅಧಿವೇಶನಕ್ಕೆ ಪ್ರತಿಪಕ್ಷಗಳು ಅಡ್ಡಿ ಮಾಡುವ ಸಾಧ್ಯತೆ ಹೆಚ್ಚಿದೆ. ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜೀನಾಮೆ, ಇಲ್ಲವೇ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಆಗ್ರಹಿಸಿ ಸದನದಲ್ಲಿ ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಈ ವಿಚಾರವಾಗಿ ಮಾತನಾಡಲು ಅವಕಾಶ ನೀಡುವಂತೆ ಕೋರುವುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈಗಾಗಲೇ ತಿಳಿಸಿದ್ದು, ಸ್ಪೀಕರ್ ಇದಕ್ಕೆ ಅವಕಾಶ ನೀಡದಿದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.