ಬೆಂಗಳೂರು:ರಾಜ್ಯದ 17 ರ ಪೈಕಿ 15 ಅನರ್ಹ ಶಾಸಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಬಿರುಸುಗೊಂಡಿದೆ.
ಮಸ್ಕಿ ಹಾಗೂ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳ ಹೊರತುಪಡಿಸಿ ಉಳಿದ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಕಾಂಗ್ರೆಸ್ ಪಾಲಿಗೆ ಈ ಕ್ಷೇತ್ರಗಳ ಗೆಲುವು ಅತ್ಯಂತ ಪ್ರತಿಷ್ಠೆಯಾಗಿ ಪರಿಣಮಿಸಿದೆ. ಚುನಾವಣೆ ಘೋಷಣೆಗೆ ಮುನ್ನವೇ ಸಾಕಷ್ಟು ಸಿದ್ಧತೆ ನಡೆಸಿರುವ ರಾಜಕೀಯ ಪಕ್ಷಗಳು ಇದೀಗ ಚುನಾವಣಾ ದಿನಾಂಕ ಘೋಷಣೆಯಾದ ನಂತರ ಇನ್ನಷ್ಟು ಚುರುಕಾಗಿ ಕಾರ್ಯ ನಿರ್ವಹಣೆ ಆರಂಭಿಸಲಿವೆ.
17 ಕ್ಷೇತ್ರಗಳ ಪೈಕಿ 14 ಕ್ಷೇತ್ರವನ್ನು ಕಾಂಗ್ರೆಸ್ ಕಳೆದುಕೊಂಡಿದೆ. ಮರಳಿ ಆ ಕ್ಷೇತ್ರವನ್ನು ಕೈ ವಶ ಮಾಡಿಕೊಳ್ಳುವ ನಿಟ್ಟಿನಲ್ಲಿ ಕಾರ್ಯ ತಂತ್ರ ಹೆಣೆಯುತ್ತಿದೆ. ಇದೀಗ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಕೂಡ ಹೊರಬಿದ್ದಿದೆ. ಸಾಕಷ್ಟು ಅಳೆದು - ತೂಗಿ ಪಕ್ಷ ನಿಷ್ಠೆಯನ್ನು ಅತ್ಯಂತ ಪ್ರಮುಖವಾಗಿ ಪರಿಗಣಿಸಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ನಿಷ್ಠಾವಂತ ಕಾಂಗ್ರೆಸ್ ನಾಯಕರ ಅಭಿಪ್ರಾಯ ಪಡೆದು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.