ಬೆಂಗಳೂರು:ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಜನ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಹಾಗೂ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಈಟಿವಿ ಭಾರತ್ ಜೊತೆ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ವಿಫಲವಾಗಿವೆ. ಕೋವಿಡ್-19 ಆತಂಕದ ಸಂದರ್ಭದಲ್ಲಿ ಇದಕ್ಕೆ ಸೂಕ್ತ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿವೆ.
ನಿಯಂತ್ರಿಸಲು ಸಾಧ್ಯವಾಗದೇ ದೇಶವನ್ನು ಹಲವು ರೀತಿಯ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ದೇಶದ ಆರ್ಥಿಕತೆ ಕುಸಿದು ಜಿಡಿಪಿ ನೆಲಕಚ್ಚಿದೆ. ಪ್ರವಾಹದಿಂದ ಸಾಕಷ್ಟು ಸಮಸ್ಯೆ ಎದುರಾಗಿದೆ, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ, ಇವೆಲ್ಲವನ್ನು ಗಮನಿಸಿದರೆ ರಾಜ್ಯದಲ್ಲಿ ಸರ್ಕಾರ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿಲ್ಲ, ಕೇವಲ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂಬುದು ಸ್ಪಷ್ಟವಾಗುತ್ತದೆ.
ರಾಜ್ಯದ ಮುಖ್ಯಮಂತ್ರಿಗಳ ಕುಟುಂಬದವರೇ ನೇರವಾಗಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಈ ಮಧ್ಯೆ ಬಂದಿರುವ ನಾಲ್ಕು ವಿಧಾನಪರಿಷತ್ ಚುನಾವಣೆ ಹಾಗೂ 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪ್ರಬುದ್ಧ ಜನತೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ವಿಶ್ವಾಸ ಇದೆ. ಯಾಕೆಂದರೆ, ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದರು.