ಬೆಂಗಳೂರು: ರಾಜ್ಯ ಮಟ್ಟದ ಹಲವು ಸರ್ಕಾರಿ ಕಚೇರಿಗಳನ್ನು ಒಂದು ತಿಂಗಳಲ್ಲಿ ಗುರುತಿಸಿ ಬೆಂಗಳೂರಿನಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಶೀಘ್ರವಾಗಿ ಸ್ಥಳಾಂತರಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮ ನೇತೃತ್ವದಲ್ಲಿ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ, ಮುಂದಿನ ಸಭೆಯೊಳಗೆ ಹಲವಾರು ಕಚೇರಿಗಳು ಬೆಳಗಾವಿಯ ಸುವರ್ಣ ಸೌಧದಲ್ಲಿ ಕೆಲಸ ನಿರ್ವಹಿಸಬೇಕು. ಅದನ್ನು ತಾವೇ ಖುದ್ದಾಗಿ ಪರಿಶೀಲಿಸುವುದಾಗಿ ಎಚ್ಚರಿಸಿದರು.
ರಾಜ್ಯದಲ್ಲಿ ಪ್ರವಾಹ ಕಾಮಗಾರಿಗಳನ್ನು 500 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಂಡಿದ್ದು, ಪ್ರವಾಹದಿಂದ ಹಾಳಾಗಿರುವ 1800 ರಸ್ತೆ ಕಾಮಗಾರಿಗಳ ಪೈಕಿ 1700 ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿವೆ. ಸೇತುವೆ ದುರಸ್ತಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಇಂಜಿನಿಯರ್‌ಗಳು ನೇಮಕಾತಿ ಪ್ರಕ್ರಿಯೆ ವಿಳಂಬವಾಗಿರುವುದರಿಂದ ನಿರುದ್ಯೋಗಿ ಇಂಜಿನಿಯರ್ಗಳನ್ನು ಟ್ರೈನಿಗಳೆಂದು ನೇಮಕ ಮಾಡಲು ಮುಖ್ಯಮಂತ್ರಿಗಳು ಆದೇಶಿಸಿದರು. ಶಿವಮೊಗ್ಗ ನಗರದ ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣದ ನಿರ್ಮಾಣ ಕಾಮಗಾರಿಯನ್ನು ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಸೂಚಿಸಿದರು. ವಿಜಯಪುರ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಜಮೀನನ್ನು ಈಗಾಗಲೇ ಗುರುತಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪುನರ್ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ತಿಳಿಸಿದರು.