ಬೆಂಗಳೂರು:ಮಳೆಗಾಲದ ಅಧಿವೇಶನ ಆರಂಭಕ್ಕೂ ಮುನ್ನವೇ ಸಚಿವ ಸ್ಥಾನ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೀಡಿದ್ದಾರೆ. ಅಧಿವೇಶನಕ್ಕೆ ಸಚಿವರಾಗಿಯೇ ಆಗಮಿಸುತ್ತೇವೆ ಎಂದು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಗಳಾಗಿರುವ ಎಂಟಿಬಿ ನಾಗರಾಜ್ ಹಾಗೂ ಆರ್. ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಸಚಿವ ಸ್ಥಾನದ ಆಕಾಂಕ್ಷಿಗಳಾದ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಹಾಗೂ ಆರ್ ಶಂಕರ್ ಭೇಟಿ ನೀಡಿದರು. ಸಿಎಂ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಸಹಜವಾಗಿಯೇ ಸಚಿವ ಸ್ಥಾನದ ಕುರಿತು ಚರ್ಚೆ ನಡೆಸಿದ್ದಾರೆ. ಆಕಾಂಕ್ಷಿಗಳ ಅಪೇಕ್ಷೆಯನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಅವರು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸಿಎಂ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಎಂಟಿಬಿ ನಾಗರಾಜ್, ಕೊರೊನಾ ಸೋಂಕಿನಿಂದ ಗುಣಮುಖರಾಗಿ ನಿವಾಸಕ್ಕೆ ಮರಳಿದ ನಂತರ ಮುಖ್ಯಮಂತ್ರಿಗಳನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಇಂದು ಆಗಮಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಯೋಗಕ್ಷೇಮ ವಿಚಾರಿಸಿದ್ದೇವೆ ಎಂದರು.
ಆದಷ್ಟು ಬೇಗ ನಮ್ಮನ್ನು ಸಚಿವರನ್ನಾಗಿ ಮಾಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಯಡಿಯೂರಪ್ಪ ನಮ್ಮ ನಾಯಕ, ನಮ್ಮ ನಾಯಕರ ಮೇಲೆ ನಮಗೆ ಭರವಸೆ ಹಾಗೂ ನಂಬಿಕೆ ಇದೆ. ಅವರ ಮೇಲೆ ವಿಶ್ವಾಸವಿಟ್ಟೇ ನಾವು ಬಿಜೆಪಿಗೆ ಬಂದಿದ್ದೇವೆ. ನಮ್ಮ ನಂಬಿಕೆಯನ್ನು ಅವರು ಉಳಿಸಿಕೊಳ್ಳಲಿದ್ದಾರೆ ಎನ್ನುವ ವಿಶ್ವಾಸ ನಮಗಿದೆ ಎಂದು ತಿಳಿಸಿದರು.
ಎಷ್ಟು ಜನರನ್ನು ಸಚಿವರನ್ನಾಗಿ ಮಾಡುತ್ತಾರೆ ಎನ್ನುವುದು ಗೊತ್ತಿಲ್ಲ. ಆದರೆ, ನಮ್ಮನ್ನು ಮಾತ್ರ ಸಚಿವರನ್ನಾಗಿ ಮಾಡುತ್ತಾರೆ, ಆದಷ್ಟು ಬೇಗ ನಮ್ಮನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಿದ್ದಾರೆ. ಅಧಿವೇಶನಕ್ಕೂ ಮೊದಲೇ ನಾವು ಸಚಿವರಾಗುತ್ತೇವೆ, ಸಚಿವರಾಗಿ ನಾವು ಅಧಿವೇಶನದಲ್ಲಿ ಪಾಲ್ಗೊಳ್ಳುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ತೆರಳುವ ಬಗ್ಗೆ ಯಾವುದೇ ಮಾಹಿತಿ ಇಲ್ಲವೆಂದು ತಿಳಿಸಿದ ಎಂಟಿಬಿ ನಾಗರಾಜ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿಲ್ಲ, ಅವರೊಂದಿಗೆ ಯಾವ ಮಾತುಕತೆಯನ್ನೂ ನಡೆಸಿಲ್ಲವೆಂದು ಸ್ಪಷ್ಟಪಡಿಸಿದರು.
ನಂತರ ಮಾತನಾಡಿದ ಆರ್.ಶಂಕರ್, ಆದಷ್ಟು ಬೇಗ ಸಚಿವ ಸಂಪುಟಕ್ಕೆ ನಮ್ಮನ್ನು ಸೇರ್ಪಡೆ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಸಚಿವರಾಗಿಯೇ ನಾವು ಅಧಿವೇಶನಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.