ಬೆಂಗಳೂರು: ಕೊರೋನಾ ನಿಯಂತ್ರಣಕ್ಕೆ ವಿಧಿಸಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ ಮೇಕೆದಾಟು ಯೋಜನೆ ಅನುಷ್ಟಾನಕ್ಕೆ ಪಾದಯಾತ್ರೆ ನಡೆಸಿದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಮತ್ತಿತರ ಕಾಂಗ್ರೆಸ್ ಪಕ್ಷದ ಸದಸ್ಯರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಪಡಿಸಿದೆ.
ಇದರಿಂದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕೊರೋನಾ ನಿಯಂತ್ರಣಕ್ಕೆ ವಿಧಿಸಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ ನಡೆದ ಪಾದಯಾತ್ರೆಯ ವೇಳೆ ದಾಖಲಾಗಿದ್ದ ನಾಲ್ಕು ಪ್ರಕರಣಗಳು ರದ್ದಾದಂತಾಗಿದೆ. ಡಿ. ಕೆ. ಶಿವಕುಮಾರ್ ಸಿದ್ದರಾಮಯ್ಯ ಸೇರಿದಂತೆ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಪ್ರಕರಣವನ್ನು ರದ್ದು ಪಡಿಸಿ ಆದೇಶಿಸಿದೆ.
ಸಾಂಕ್ರಾಮಿಕ ರೋಗಗಳ ತಡೆ ಕಾಯಿದೆ ಸೆಕ್ಷನ್ 1 ಮತ್ತು 5ನ್ನು ಉಲ್ಲಂಘಿಸಿದವರು ಶಿಕ್ಷೆಗೆ ಅರ್ಹರಾಗಿರುತ್ತಾರೆ. ಆದರೆ, ರಾಜ್ಯ ಸರ್ಕಾರ ಈ ಸಂಬಂಧ ನಿರ್ಬಂಧ ವಿಧಿಸಿ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ಅದಕ್ಕೆ ಬದಲಾಗಿ ವಿಪತ್ತು ನಿರ್ವಹಣಾ ಕಾಯಿದೆಯಡಿ ಅಧಿಸೂಚನೆ ಹೊರಡಿಸಿದೆ. ಹೀಗಾಗಿ ಸಾಂಕ್ರಾಮಿಕ ರೋಗಗಳ ತಡೆ ಕಾಯಿದೆಯಡಿ ದಾಖಲಾಗಿರುವ ದೂರು ಮತ್ತು ಅದರ ವಿಚಾರಣೆಗೆ ಅರ್ಹವಿಲ್ಲ.
ಜೊತೆಗೆ, ಸಾಂಕ್ರಾಮಿಕ ರೋಗಗಳ ಕಾಯಿದೆಯಡಿ ಪ್ರಕರಣ ದಾಖಲಿಸಿ ಆರೋಪ ಪಟ್ಟಿ ಸಲ್ಲಿಸುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಿರುವ ಪೀಠ ಪ್ರಕರಣವನ್ನು ರದ್ದು ಪಡಿಸಿ ಆದೇಶಿಸಿದೆ. ಅಲ್ಲದೇ, ಪ್ರಕರಣ ಸಂಬಂಧ ಕಾಗ್ನಿಜೆನ್ಸ್ ತೆಗೆದುಕೊಂಡಿರುವ ವಿಚಾರಣಾ ನ್ಯಾಯಾಲಯದ ಕ್ರಮ ಕಾನೂನು ಬಾಹಿರವಾಗಿದೆ. ಹೀಗಾಗಿ ಪ್ರಕರಣವನ್ನು ರದ್ದು ಪಡಿಸುತ್ತಿರುವುದಾಗಿ ಪೀಠ ತಿಳಿಸಿದೆ.