ಬೆಂಗಳೂರು:ಚಿಕ್ಕಮಗಳೂರಿನ ಪೊಲೀಸರು ವಕೀಲ ಪ್ರೀತಮ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದಡಿ ಸಿಐಡಿ ತನಿಖೆ ಆರಂಭಿಸಲಾಗಿದ್ದು, ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಸರ್ಕಾರದ ಭರವಸೆ ಹಿನ್ನೆಲೆ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.
ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಅಲ್ಲದೇ ಪ್ರಕರಣದ ಸಂಬಂಧ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದನ್ನು ನಾವು ನೋಡುತ್ತಿದ್ದೇವೆ. ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಸಿಐಡಿ ಈಗಾಗಲೇ ತನಿಖೆ ಆರಂಭಿಸಿರುವುದರಿಂದ ಈ ಹಂತದಲ್ಲಿ ಯಾವುದೇ ನಿರ್ದೇಶನ ನೀಡಲಾಗದು. ಅರ್ಜಿಯ ಉದ್ದೇಶ ಈಡೇರಿದೆ. ಹಾಗಾಗಿ ಅರ್ಜಿಯನ್ನು ಮುಂದುವರಿಸುವುದರಲ್ಲಿ ಅರ್ಥವಿಲ್ಲ. ಆದ್ದರಿಂದ ವಿಲೇವಾರಿ ಮಾಡಲಾಗುತ್ತಿದೆ ಎಂದು ತನ್ನ ಆದೇಶದಲ್ಲಿ ತಿಳಿಸಿದೆ.
ವಿಚಾರಣೆ ವೇಳೆ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಹಾಗೂ ಹಿರಿಯ ನ್ಯಾಯವಾದಿ ವಿವೇಕ್ ಸುಬ್ಬಾರೆಡ್ಡಿ, ಪೊಲೀಸರಿಂದ ವಕೀಲ ಪ್ರೀತಮ್ ಮೇಲೆ ಹಲ್ಲೆ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು, ಸ್ಥಳೀಯ ಪೊಲೀಸರ ನೆರವು ಪಡೆಯುತ್ತಿದೆ. ಸ್ಥಳೀಯ ಪೊಲೀಸರು ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಮತ್ತು ಕಿರುಕುಳ ನೀಡುತ್ತಿದ್ದಾರೆ. ಜತೆಗೆ ಪ್ರಕರಣ ನಡೆದು ಇಷ್ಟು ದಿನವಾದರೂ ಇನ್ನೂ ತಪ್ಪಿತಸ್ಥರನ್ನು ಬಂಧಿಸಿಲ್ಲ ಎಂದು ಆರೋಪಿಸಿದರು. ಅಲ್ಲದೇ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕಾದರೆ ಸ್ವತಂತ್ರ ತನಿಖಾ ಪಡೆಯನ್ನು ನೇಮಕ ಮಾಡಬೇಕು ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ತನಿಖೆಯನ್ನು ಹೀಗೆಯೇ ನಡೆಸಬೇಕು ಎಂದು ನ್ಯಾಯಾಲಯ ಹೇಳಲು ಸಾಧ್ಯವಿಲ್ಲ. ತನಿಖೆ ಪೂರ್ಣಗೊಳಿಸಲು ಕಾಲಮಿತಿ ನೀಡುವುದಕ್ಕೆ ಸಾಧ್ಯವಿಲ್ಲ, ಆದರೆ, ಶೀಘ್ರ ತನಿಖೆ ಪೂರ್ಣಗೊಳಿಸಬೇಕು. ಒಂದು ವೇಳೆ ತನಿಖೆ ಸಮಪರ್ಕವಾಗದಿದ್ದರೆ ಕಾನೂನಿನ ಪ್ರಕ್ರಿಯೆ ಅನುಸರಿಸಲು ನಿಮಗೆ ಎಲ್ಲ ಸ್ವಾತಂತ್ರ್ಯವಿದೆ. ಸಿಐಡಿ ತನಿಖೆ ಆರಂಭವಾಗಿರುವುದರಿಂದ ಈ ಹಂತದಲ್ಲಿ ಎಸ್‌ಐಟಿ ರಚನೆ ಮಾಡಲಾಗದು ಎಂದು ಹೇಳಿತು.