ಬೆಂಗಳೂರು: ನಗರದ ಕಾಚರಕನಹಳ್ಳಿ ಸಮೀಪದ ಕೊಳಗೇರಿಯಲ್ಲಿ ಇದ್ದಂತಹ ವಲಸೆ ಕಾರ್ಮಿಕರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.
ನಗರದ ವಕೀಲೆ ವೈಶಾಲಿ ಹೆಗಡೆ ಅವರು ಘಟನೆಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರಿಗೆ ಪತ್ರ ಬರೆದಿದ್ದರು. ಪತ್ರ ಆಧರಿಸಿ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿ ಅದನ್ನು ನ್ಯಾಯಾಲಯದ ಮುಂದೆ ಮಂಡಿಸಲು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಸೂಚಿಸಲಾಗಿದೆ. ಅರ್ಜಿಯಲ್ಲಿ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯನ್ನು ಪ್ರತಿವಾದಿಯನ್ನಾಗಿ ಸೇರಿಸಲಾಗಿದ್ದು, ಪ್ರಕರಣ ಸಂಬಂಧ ಸ್ಪಷ್ಟನೆ ನೀಡುವಂತೆ ಪ್ರತಿವಾದಿಗಳಿಗೆ ಸೂಚಿಸಿರುವ ಹೈಕೋರ್ಟ್, ವಿಚಾರಣೆಯನ್ನು ಜೂನ್ 11ಕ್ಕೆ ನಿಗದಿಪಡಿಸಿದೆ.
ಪ್ರಕರಣದ ಹಿನ್ನೆಲೆ: ಕೆಲ ದಿನಗಳ ಹಿಂದೆ ನಗರದ ಕಾಚರಕನಹಳ್ಳಿ ಸಮೀಪದ ಕೊಳಗೇರಿ ಪ್ರದೇಶದಲ್ಲಿದ್ದ ಗುಡಿಸಲುಗಳು ಬೆಂಕಿಗೆ ಆಹುತಿಯಾಗಿದ್ದವು. ಈ ಕುರಿತು ಮೇ 29ರಂದು ವಕೀಲೆ ವೈಶಾಲಿ ಹೆಗಡೆ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದರು. ಲಾಕ್ಡೌನ್ ಸಡಿಲಗೊಂಡ ಬಳಿಕ ಕಾರ್ಮಿಕರು ತಮ್ಮ ಊರುಗಳಿಗೆ ತೆರಳುತ್ತಿದ್ದಂತೆ ಅವರ ಗುಡಿಸಲುಗಳಿಗೆ ಕೆಲ ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಈ ಕುರಿತು ಮಾಧ್ಯಮಗಳು ವರದಿ ಮಾಡಿವೆ.
ಕಲಬುರಗಿ ಮೂಲದ ವಲಸೆ ಕಾರ್ಮಿಕರು ವಾಸಿಸುತ್ತಿದ್ದ ಗುಡಿಸಲುಗಳಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳು, ಅಲ್ಲಿನ ಭೂಮಿಯನ್ನು ವಶಪಡಿಸಿಕೊಳ್ಳುವ ಹುನ್ನಾರ ನಡೆಸಿದ್ದಾರೆ. ಇದಕ್ಕೆ ಪೂರಕವೆಂಬಂತೆ ದುಷ್ಕರ್ಮಿಗಳ ಮೇಲೆ ಅಧಿಕಾರಿಗಳು ಘಟನೆ ಸಂಬಂಧ ಯಾವುದೇ ಕ್ರಮ ಕೈಗೊಂಡಿರುವುದು ಬೆಳಕಿಗೆ ಬಂದಿಲ್ಲ. ಮುಖ್ಯವಾಗಿ ಈ ಘಟನೆ ಕಾರ್ಮಿಕರ ಜೀವಿಸುವ ಹಕ್ಕನ್ನೇ ಕಸಿದುಕೊಂಡಿದೆ. ಹೀಗಾಗಿ ಘಟನೆ ಸಂಬಂಧ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ಮನವಿ ಮಾಡಿದ್ದರು.