ಬೆಂಗಳೂರು :ಪ್ಲೇ ಸ್ಟೋರ್ ನಿಯಮಗಳ ಕುರಿತು ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ತಂತ್ರಜ್ಞಾನ ದೈತ್ಯ ಸಂಸ್ಥೆ ಗೂಗಲ್ ವಿರುದ್ದ ಜನವರಿ 5ರವರೆಗೆ ಯಾವುದೇ ಬಲವಂತದ ಕ್ರಮ ಜರುಗಿಸುವುದಿಲ್ಲ ಎಂದು ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ಹೈಕೋರ್ಟ್‌ಗೆ ಭರವಸೆ ನೀಡಿದೆ.
ಸಿಸಿಐ ತನಿಖೆಗೆ ಉತ್ತರಿಸಲು ಕಾಲಾವಕಾಶ ಕೋರಿ ಹಾಗೂ ತನಿಖೆಯ ವಿಷಯಕ್ಕೆ ಸಂಬಂಧಿಸಿದಂತೆ ಕೆಲ ನಿರ್ದೇಶನಗಳನ್ನು ಕೋರಿ ಗೂಗಲ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ಇಂದು ನ್ಯಾಯಮೂರ್ತಿ ಬಿ.ಎಂ ಶ್ಯಾಮ್‌ಪ್ರಸಾದ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಗೂಗಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಪರ ವಾದ ಮಂಡಿಸಿದ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಗೋಪಾಲ್ ಸುಬ್ರಮಣ್ಯಂ, ಸಿಸಿಐ ಹೊರಡಿಸಿರುವ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿದರು.
ಸಿಸಿಐ ಪರ ವಾದ ಮಂಡಿಸಿದ ಅಡಿಷನಲ್ ಸಾಲಿಸಿಟರ್ ಜನರಲ್ ಎನ್. ವೆಂಕಟರಾಮನ್ ಸಿಸಿಐ ಕ್ರಮವನ್ನು ಸಮರ್ಥಿಸಿದರು. ಅಲ್ಲದೇ, ಮುಂದಿನ ವಿಚಾರಣೆವರೆಗೂ ಗೂಗಲ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸುವುದಿಲ್ಲ ಎಂದು ಭರವಸೆ ನೀಡಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ವಿಚಾರಣೆಯನ್ನು ಜನವರಿ 5ಕ್ಕೆ ಮುಂದೂಡಿತು.