ಬೆಂಗಳೂರು: ರಾಜ್ಯ ಸರ್ಕಾರ ಕೊರೊನಾ ಅಲೆಯ ನಿಯಂತ್ರಣಕ್ಕೆ 14 ದಿನಗಳ ಕಟ್ಟುನಿಟ್ಟಿನ ಕರ್ಫ್ಯೂ ಜಾರಿಗೊಳಿಸಿರುವ ಹಿನ್ನೆಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆಯಾ? ಎನ್ನುವ ಪ್ರಶ್ನೆ ಮೂಡಿದೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ತನಿಖೆಗೆ ತಾತ್ಕಾಲಿಕವಾಗಿ ಹಿನ್ನಡೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ ಕೊರೊನಾ ಪಾಸಿಟಿವ್ ಬಂದು ಕಳೆದ ಎರಡು ವಾರಗಳ ಹಿಂದೆಯೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೂ ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗಿಲ್ಲ. ವಾರದ ಹಿಂದೆಯೇ ಎಸ್ಐಟಿ ಮುಂದೆ ಜಾರಕಿಹೊಳಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ಆರೋಗ್ಯ ಸಮಸ್ಯೆಯಿಂದಾಗಿ ವಿಚಾರಣೆಗೆ ಹಾಜರಾಗಿರಲಿಲ್ಲ.
ಈಗ ಎಲ್ಲ ಅಧಿಕಾರಿಗಳು ಕೊರೊನಾ ಕರ್ಫ್ಯೂ ಕರ್ತವ್ಯದಲ್ಲಿ ಮಗ್ನರಾಗಿದ್ದಾರೆ. ಪ್ರಕರಣ ಸಂಬಂಧ ತನಿಖೆಗೆ ಹೆಚ್ಚಿನ ಕಾಲಾವಕಾಶ ಬೇಕಿದ್ದು, ಹೆಚ್ಚೆಚ್ಚು ಸಾಕ್ಷ್ಯಾಧಾರ, ದಾಖಲೆಗಳನ್ನು ಸಂಗ್ರಹಿಸಬೇಕಿದೆ. ಆದರೆ, ಸಾಕಷ್ಟು ಅಧಿಕಾರಿಗಳು ಈ ಪ್ರಕರಣ ಸಂಬಂಧ ಆಸಕ್ತಿಯನ್ನು ತೋರುತ್ತಿಲ್ಲ. ಹೀಗಾಗಿ ತನಿಖೆ ಬೇಕಾಬಿಟ್ಟಿಯಾಗಿ ನಡೆಯುತ್ತಿದೆ ಎಂದು ಹೇಳಲಾಗ್ತಿದೆ.