ಕರ್ನಾಟಕ

karnataka

ETV Bharat / state

ರಾಜ್ಯದ ಎಲ್ಲ ಗ್ರಾಮಗಳಿಗೂ ಸ್ಮಶಾನ ಭೂಮಿ; ಸ್ಥಳೀಯ ಸಂಸ್ಥೆಗಳ ಸುಪರ್ದಿಗೆ ನೀಡುವುದು ಬಾಕಿ- ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ - ಜಿಲ್ಲಾಧಿಕಾರಿಗಳ ವಿರುದ್ಧ ಕಠಿಣ ಕ್ರಮ

ರಾಜ್ಯದಲ್ಲಿ ಸ್ಮಶಾನವಿಲ್ಲದ ಗ್ರಾಮ ಮತ್ತು ಪಟ್ಟಣಗಳಿಗೆ ಅಗತ್ಯ ಜಮೀನು ಒದಗಿಸಲು ಹೈಕೋರ್ಟ್ ಹೊರಡಿಸಿರುವ ಆದೇಶವನ್ನು ಸರ್ಕಾರ ಪಾಲಿಸಿಲ್ಲ ಎಂದು ಆಕ್ಷೇಪಿಸಿ ಮಹಮ್ಮದ್ ಇಕ್ಬಾಲ್ ಎಂಬವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

highcourt
ಹೈಕೋರ್ಟ್​

By

Published : Jun 22, 2023, 10:05 PM IST

ಬೆಂಗಳೂರು: ಜನವಸತಿ ಇರುವ ರಾಜ್ಯದ ಎಲ್ಲ ಗ್ರಾಮಗಳಿಗೆ ಸ್ಮಶಾನ ಭೂಮಿ ಒದಗಿಸಲಾಗಿದೆ. ಕೇವಲ ಐದು ಗ್ರಾಮಗಳಲ್ಲಿ ಮಾತ್ರ ಮಂಜೂರು ಮಾಡಿರುವ ಭೂಮಿಯ ಪಹಣಿ ನೋಂದಣಿ ಮಾಡಿ, ಸ್ಥಳೀಯ ಸಂಸ್ಥೆಗಳ ಸುಪರ್ದಿಗೆ ಜಮೀನು ಒಪ್ಪಿಸಬೇಕಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಸ್ಮಶಾನವಿಲ್ಲದ ಗ್ರಾಮ ಮತ್ತು ಪಟ್ಟಣಗಳಿಗೆ ಅಗತ್ಯ ಜಮೀನು ಒದಗಿಸಲು ಹೈಕೋರ್ಟ್ ಹೊರಡಿಸಿರುವ ಆದೇಶವನ್ನು ಸರ್ಕಾರ ಪಾಲಿಸಿಲ್ಲ ಎಂದು ಆಕ್ಷೇಪಿಸಿ ಬೆಂಗಳೂರು ನಿವಾಸಿ ಮಹಮ್ಮದ್ ಇಕ್ಬಾಲ್ ಸಲ್ಲಿಸಿದ್ದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಜಿ. ನರೇಂದರ್ ಮತ್ತು ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆಯಲ್ಲಿ ವರದಿ ಸಲ್ಲಿಸಿದ ಸರ್ಕಾರಿ ವಕೀಲರು, 2023 ರ ಜೂ.21ರ ವೇಳೆಗೆ (ಬುಧವಾರ) ರಾಜ್ಯದಲ್ಲಿ ಜನವಸತಿ ಇರುವ ಎಲ್ಲ ಗ್ರಾಮಗಳಿಗೂ ಸ್ಮಶಾನ ಭೂಮಿ ಮಂಜೂರು ಮಾಡಲಾಗಿದೆ. ಕೇವಲ ಐದು ಗ್ರಾಮಗಳಲ್ಲಿ ಸ್ಮಶಾನ ಭೂಮಿಯ ಪಹಣಿ ನೋಂದಣಿ ಮಾಡಬೇಕಿದೆ. ಒತ್ತುವರಿಯಾಗಿರುವ ಎರಡು ಸ್ಮಶಾನಗಳ ಭೂಮಿಯನ್ನು ತೆರವುಗೊಳಿಸಬೇಕಿದೆ. ಈಗಾಗಲೇ ತೆರವುಗೊಳಿಸಿರುವ ನಾಲ್ಕು ಸ್ಮಶಾನಗಳ ಭೂಮಿಯನ್ನು ಸ್ಥಳೀಯ ಸಂಸ್ಥೆಯ ಸುಪರ್ದಿಗೆ ನೀಡಬೇಕಿದೆ ಎಂದು ಮಾಹಿತಿ ನೀಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅರ್ಜಿದಾರ ವಕೀಲ ಇಕ್ಬಾಲ್, ಸ್ಮಶಾನಕ್ಕೆ ಜಾಗವಿಲ್ಲದ ಗ್ರಾಮಗಳಲ್ಲಿ ಅಗತ್ಯ ಭೂಮಿ ಮಂಜೂರಾತಿಗೆ ಕೋರಿ ಸ್ಥಳೀಯ ನಿವಾಸಿಗಳು ಅರ್ಜಿ ಸಲ್ಲಿಸಬಹುದು ಎಂಬುದಾಗಿ ತಿಳಿಸಿ ಸರ್ಕಾರ ಸಾರ್ವಜನಿಕ ಪ್ರಕಟಣೆ ನೀಡಿತ್ತು. ಅದರಂತೆ ಸ್ಮಶಾನಕ್ಕೆ ಹೆಚ್ಚುವರಿ ಜಾಗ ಮಂಜೂರು ಮಾಡುವಂತೆ ಅನೇಕ ಗ್ರಾಮಗಳ ನಿವಾಸಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ನನಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ, 16 ಗ್ರಾಮಗಳ ನಿವಾಸಿಗಳು ತಮ್ಮ ಸಮುದಾಯಕ್ಕೆ ಪ್ರತ್ಯೇಕ ಸ್ಮಶಾನ ಭೂಮಿ ಮಂಜೂರಾತಿಗೆ ಕೋರಿದ್ದಾರೆ. ಮನವಿ ಸಲ್ಲಿಸಿದವರಲ್ಲಿ ಮುಸ್ಲಿಂ ಬೌದ್ಧ ಹಾಗೂ ಜೈನ ಸಮುದಾಯದವರು ಇದ್ದಾರೆ. ಇನ್ನೂ ಸ್ಮಶಾನಕ್ಕಾಗಿ ಹೆಚ್ಚುವರಿ ಭೂಮಿ ಮಂಜೂರಾತಿಗೆ ಕೋರಲಾಗಿದೆ. ಅವುಗಳನ್ನು ಸರ್ಕಾರ ಪರಿಗಣಿಸಬೇಕಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ವಾದ ಆಲಿಸಿದ ನ್ಯಾಯಪೀಠ, ಸ್ಮಶಾನ ಭೂಮಿ ಇಲ್ಲದ ಗ್ರಾಮದಲ್ಲಿ ಅಗತ್ಯ ಜಾಗ ಮಂಜೂರು ಮಾಡಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಭೂಮಿ ಮಂಜೂರು ಮಾಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು. ತಪ್ಪಿದರೆ ಆ ಜಿಲ್ಲಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ವಿಚಾರಣೆಯನ್ನು ಜು.15ಕ್ಕೆ ಮುಂದೂಡಿತು. ಬೆಂಗಳೂರು ನಗರ, ಮಂಡ್ಯ ಜಿಲ್ಲಾಧಿಕಾರಿ, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಗಳ ಹೆಚ್ಚುವರಿ ಜಿಲ್ಲಾಧಿಕಾರಿಗಳು ವಿಚಾರಣೆ ವೇಳೆ ಖುದ್ದು ಹಾಜರಿದ್ದರು.

ಇದನ್ನೂಓದಿ:Brij Bhushan Singh: ಜನಪ್ರತಿನಿಧಿಗಳ ಕೋರ್ಟ್​ಗೆ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಪ್ರಕರಣ ವರ್ಗಾವಣೆ

ABOUT THE AUTHOR

...view details