ಬೆಂಗಳೂರು:ಸಗಟು ರೂಪದ ಇಂಧನ ಬೆಲೆ ಗಣನೀಯವಾಗಿ ಇಳಿಕೆ ಕಂಡರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮಾತ್ರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಯಾವ ಅಭಿವೃದ್ಧಿಯ ಪ್ರತೀಕ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್ಆರ್ ಪಾಟೀಲ್ ಪ್ರಶ್ನಿಸಿದ್ದಾರೆ.
ಟ್ವೀಟ್ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿರುವ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದೆ. ಆದರೆ, ಕೇಂದ್ರ ಸರ್ಕಾರ ಮಾತ್ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಸವಾರಿ ಮಾಡುತ್ತಿದೆ ಎಂದು ಗರಂ ಆದರು.
ಫೆಬ್ರವರಿ 9ರಂದು ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ತಲಾ 42 ಪೈಸೆ ಏರಿಕೆ ಮಾಡಲಾಗಿತ್ತು. ಫೆಬ್ರವರಿ 10ರಂದು ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ತಲಾ 31 ಪೈಸೆ ಏರಿಕೆ ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕೊರೊನಾ, ಲಾಕ್ಡೌನ್ನಿಂದಾಗಿ ದೇಶದ ಜನ ಪಡಬಾರದ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಮಧ್ಯೆ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರವನ್ನು ನಿರಂತರವಾಗಿ ಹೆಚ್ಚಿಸುತ್ತಲೇ ಇದೆ. ಲೀಟರ್ ಪೆಟ್ರೋಲ್ ದರ 90ರ ಗಡಿ ದಾಟಿದ್ದು, ಲೀಟರ್ ಡೀಸೆಲ್ ಬೆಲೆ 80ರ ಗಡಿ ದಾಟಿ ಮುನ್ನುಗುತ್ತಿದೆ. ಕೇಂದ್ರ ಸರ್ಕಾರದ ಈ ದರ ಏರಿಕೆ ನೀತಿಯಿಂದ ಜನಸಾಮಾನ್ಯರ ಜೀವನ ದುಸ್ತರವಾಗಿದೆ ಎಂದು ಹೇಳಿದರು.