ಬೆಂಗಳೂರು: ವಿವಿಧ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಜಾಮೀನಿನ ಮೇರೆ ಹೊರಗಿರುವ ಹಿಂದೂಪರ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಶೀಟ್ ತೆರೆಯಲು ಚಾಮರಾಜಪೇಟೆ ಪೊಲೀಸರು ಸಿದ್ದತೆ ನಡೆಸಿದ್ದಾರೆ. ಚಾಮರಾಜಪೇಟೆ, ರಾಮನಗರ ಹಾಗೂ ವಿಜಯನಗರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಪುನೀತ್ ವಿರುದ್ಧ ಗಲಭೆ, ದೊಂಬಿ, ಕೊಲೆ ಬೆದರಿಕೆ ಹಾಗೂ ಹಲ್ಲೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ.
ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಶೀಟ್ ತೆರೆಯಲು ತನ್ನ ವ್ಯಾಪ್ತಿಯ ಎಸಿಪಿ ಅವರಿಗೆ ವರದಿ ಸಲ್ಲಿಸಲಾಗಿದೆ. ಈ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಚಿಕ್ಕಪೇಟೆ ಉಪವಿಭಾಗ ಎಸಿಪಿಯವರು ಕೆರೆಹಳ್ಳಿಗೆ ನೊಟೀಸ್ ಜಾರಿ ಮಾಡಿದ್ದಾರೆ. ದೊಂಬಿ, ಕೊಲೆ, ಹಲ್ಲೆ, ಜೀವ ಬೆದರಿಕೆ ಹಾಗೂ ಇನ್ನಿತರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ನಿಮ್ಮ ವಿರುದ್ಧ ಏಕೆ ರೌಡಿಪಟ್ಟಿ ತೆರೆಯಬಾರದು ಎಂಬುದಕ್ಕೆ ಕೂಡಲೇ ವಿವರಣೆ ಸಲ್ಲಿಸಬಹುದು. ವಿವರಣ ನೀಡದಿದ್ದಲ್ಲಿ ಏನು ಇಲ್ಲವೆಂದು ಪರಿಗಣಿಸಿ ರೌಡಿಪಟ್ಟಿ ತೆರೆಯಲಾಗುವುದು ಎಂದು ಪುನೀತ್ ಗೆ ನೋಟಿಸ್ ಜಾರಿ ಮಾಡಿದ್ದಾರೆ.
ಜಾಮೀನಿನ ಮೇಲೆ ಹೊರಗಿರುವ ಪುನೀತ್ ಕೆರೆಹಳ್ಳಿ : ಗೋಸಾಗಣೆ ಆರೋಪದಲ್ಲಿ ಇದ್ರೀಶ್ ಪಾಷಾ ಎಂಬವರು ಅನುಮಾನಾಸ್ಪದ ರೀತಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ಹಾಗೂ ಇತರೆ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆರೋಪಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರ ನೇತೃತ್ವದ ರಜಾಕಾಲದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿತ್ತು.