ಬೆಂಗಳೂರು :ಲಕ್ಷ ದ್ವೀಪದ ಬಳಿ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ನಗರದಲ್ಲಿ ಸರಿಯುತ್ತಿರುವ ಮಳೆ ಮೂರು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗುರುವಾರ ಬೆಂಗಳೂರಿನ ದಕ್ಷಿಣ ಭಾಗಗಳಲ್ಲಿ ಭಾರಿ ಮಳೆಯಾಗಿದೆ. ವಿದ್ಯಾಪೀಠದಲ್ಲಿ ಅತಿ ಹೆಚ್ಚು (72 ಮಿ.ಮೀ) ಮಳೆ ಸುರಿದಿದೆ. ನಿನ್ನೆ ಸಂಜೆ ಆರಂಭವಾದ ಮಳೆ ಸತತವಾಗಿ ಹಲವು ಗಂಟೆಗಳು ಗುಡುಗು, ಮಿಂಚು ಸಹಿತ ಸುರಿಯಿತು. ಇದರಿಂದಾಗಿ ಕೆಲ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಯಿತು. ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳು ಸಾಲುಗಟ್ಟಿ ನಿಂತಿರುವುದು ಕಂಡು ಬಂದಿತ್ತು.
50ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರಿನಿಂದ ಹಾನಿ :ಸಿಲಿಕಾನ್ ಸಿಟಿಯ ಕಾಮಾಕ್ಯ ಚಿತ್ರಮಂದಿರದ ಸುತ್ತಮುತ್ತ 50ಕ್ಕೂ ಹೆಚ್ಚು ಮನೆಗಳಿಗೆ ತಡ ರಾತ್ರಿ ಮಳೆ ನೀರು ನುಗ್ಗಿ ಅಕ್ಕಿ, ಬೇಳೆ ಸೇರಿದಂತೆ ದಿನಬಳಕೆ ವಸ್ತುಗಳು ಹಾಳಾಗಿವೆ. ಭಾರಿ ಮಳೆಗೆ ಚರಂಡಿ ಹೊರಗಡೆ ಬಂದು ಕಾರುಗಳು ದ್ವಿಚಕ್ರ ವಾಹನಗಳು ಕೊಚ್ಚಿ ಹೋಗಿರುವುದು ಸಹ ಬೆಳಕಿಗೆ ಬಂದಿದೆ.
ಬಿಬಿಎಂಪಿ ನಿಯಂತ್ರಣ ಕೊಠಡಿಗೆ ದೂರುಗಳ ಮಹಾಪೂರ :ಕೆಲ ಬಡಾವಣೆಗಳ ರಸ್ತೆಗಳಲ್ಲಿ ಮರಗಳು ಬಿದ್ದಿರುವ ಬಗ್ಗೆ ಬಿಬಿಎಂಪಿ ನಿಯಂತ್ರಣ ಕೊಠಡಿಗೆ ಸಾಕಷ್ಟು ದೂರುಗಳು ಬಂದಿವೆ. ಬಿಬಿಎಂಪಿ ಸಿಬ್ಬಂದಿಯು ತುಂಡರಿಸಿ ಬಿದ್ದಿದ್ದ ಮರದ ರೆಂಬೆಕೊಂಬೆಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.