ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಹಗರಣ ಸಂಬಂಧ ಈ ವರೆಗೂ ದಾಖಲಾಗಿರುವ ಎಫ್‌ಐಆರ್ ಮತ್ತು ತನಿಖೆಯ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬೇರೊಂದು ಪೀಠದ ಮುಂದೆ ಪಟ್ಟಿ ಮಾಡುವಂತೆ ಮುಖ್ಯ ನ್ಯಾಯಮೂರ್ತಿ ಅವರಿದ್ದ ಪೀಠ ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ ಸೂಚನೆ ನೀಡಿದೆ. ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸಲ್ಲಿಸಿರುವ ಅರ್ಜಿ ವಿಚಾರಣೆಯು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರ ನೇತೃತ್ವದ ಪೀಠದ ಮುಂದೆ ನಿಗದಿಯಾಗಿತ್ತು. ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ವರಾಳೆ, ಈ ಪೀಠದ ಮುಂದೆ ವಿಚಾರಣೆ ಬೇಡ. ನಾವಿಬ್ಬರೂ ಇಲ್ಲದಿರುವ ಪೀಠದ ಮುಂದೆ ಅರ್ಜಿ ಪಟ್ಟಿ ಮಾಡಬೇಕು ಎಂದಷ್ಟೇ ಹೇಳಿ ವಿಚಾರಣೆಯಿಂದ ಹಿಂದೆ ಸರಿದರು.
ಅರ್ಜಿದಾರರ ಮನವಿ ಏನು?:ಅರ್ಜಿಯಲ್ಲಿ ಪಿಎಸ್‌ಐ ಹಗರಣಕ್ಕೆ ಸಂಬಂಧಿಸಿದ ಈವರೆಗೆ ವಿವಿಧೆಡೆ ದಾಖಲಾಗಿರುವ ಎಫ್‌ಐಆರ್ ಮತ್ತು ದೂರುಗಳಿಗೆ ಸಂಬಂಧಿಸಿದ ಸಂಪೂರ್ಣ ತನಿಖಾ ದಾಖಲೆಗಳನ್ನು ಸಲ್ಲಿಸಲು ಸಿಐಡಿಗೆ ಆದೇಶಿಸಬೇಕು. ಪ್ರಕರಣದ ತನಿಖೆ ನಡೆಸಿರುವ ಸಿಐಡಿಗೆ ಪೊಲೀಸ್ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಮೃತ್ ಪೌಲ್ ಬಂಧನದ ಬಳಿಕದ ಸ್ಥಿತಿಗತಿಯ ಕುರಿತು ಮಾಹಿತಿ ನೀಡಲು ನಿರ್ದೇಶಿಸಬೇಕು. ನ್ಯಾಯಯುತ, ಸ್ವಾತಂತ್ರ ಮತ್ತು ಪಾರದರ್ಶಕವಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರ ಮತ್ತು ಸಿಐಡಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಪೊಲೀಸ್ ನೇಮಕಾತಿ ವಿಭಾಗದ ಕೆಲವು ಅಧಿಕಾರಿಗಳು, ರಾಜಕಾರಣಿಗಳ ನೆರವಿನಿಂದ ಅಕ್ರಮ ಮಾರ್ಗದ ಮೂಲಕ ಕೆಲವು ಅಭ್ಯರ್ಥಿಗಳಿಗೆ ಅನುಕೂಲವಾಗಿದ್ದಾರೆ. ಇದರಿಂದ ಪಿಎಸ್‌ಐ ಪರೀಕ್ಷೆಯನ್ನು ಅರ್ಹತೆಯ ಆಧಾರದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳ ಬದುಕು ಮತ್ತು ವೃತ್ತಿಯು ಅತಂತ್ರಕ್ಕೆ ಸಿಲುಕಿದೆ. ಪರೀಕ್ಷೆ ನಡೆಸುವುದರ ಪ್ರತಿ ಹಂತದ ಕುರಿತು ನೇಮಕಾತಿ ವಿಭಾಗದ ಎಡಿಜಿಪಿ, ನೇಮಕಾತಿ ಸಮಿತಿ ಮತ್ತು ಗೃಹ ಸಚಿವರಿಗೆ ಮಾಹಿತಿ ಇತ್ತು ಎಂಬುದು ತನಿಖೆಯ ಸಂದರ್ಭದಲ್ಲಿ ಬಹಿರಂಗವಾಗಿದೆ. ಅಲ್ಲದೇ, ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದ ಅಭ್ಯರ್ಥಿಗಳು ಅಕ್ರಮ ನಡೆದಿರುವ ಕುರಿತು ದೂರು ನೀಡಿದ್ದಾರೆ. ಸಚಿವ ಸಂಪುಟದ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಶಾಸಕರು ಮತ್ತು ಗೃಹ ಸಚಿವರ ವಿರುದ್ಧ ಅಕ್ರಮದ ಆರೋಪ ಮಾಡಲಾಗಿದೆ. ಆದರೂ ಎರಡನೇ ಪ್ರತಿವಾದಿಯಾಗಿರುವ ಗೃಹ ಇಲಾಖೆಯು ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿಲ್ಲ ಎಂದು ವಾದಿಸಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಐವರು ಅಭ್ಯರ್ಥಿಗಳು ನೀಡಿರುವ ದೂರನ್ನು ಪರಿಶೀಲಿಸಲಾಗಿದ್ದು, ಯಾವುದೇ ಅಕ್ರಮ ನಡೆದಿಲ್ಲ ಎಂದು 2022ರ ಫೆಬ್ರವರಿ 17 ಮತ್ತು ಮಾರ್ಚ್ 10 ರಂದು ಗೃಹ ಸಚಿವರು ವಿಧಾನಸಭೆಗೆ ತಿಳಿಸಿದ್ದಾರೆ. ಗೃಹ ಸಚಿವರ ಈ ಹೇಳಿಕೆಯ ಹೊರತಾಗಿಯೂ ಸಿಐಡಿ ತನಿಖೆ ನಡೆಸುತ್ತಿದ್ದು, ಇದನ್ನು ಬೃಹತ್ ನೇಮಕಾತಿ ಹಗರಣ ಎಂದು ವ್ಯಾಖ್ಯಾನಿಸಿರುವುದು ಸರಿಯಾಗಿದೆ.