ಕರ್ನಾಟಕ

karnataka

ETV Bharat / state

ಸ್ವಂತ ಸಂಪನ್ಮೂಲ ಕ್ರೋಢೀಕರಣಕ್ಕೆ ನೀತಿ; ಪ್ರಸ್ತಾವನೆಗೆ ವಸತಿ ಇಲಾಖೆಗೆ ಮುಖ್ಯಮಂತ್ರಿ ಸೂಚನೆ - ಈಟಿವಿ ಭಾರತ್ ಕನ್ನಡ ಸುದ್ದಿ

ವಸತಿ ಯೋಜನೆಯಡಿ ನಿರ್ಮಾಣಗೊಂಡ ಮನೆಗಳಿಗೆ ಅಗತ್ಯ ಮೂಲಸೌಕರ್ಯವನ್ನು ಆದ್ಯತೆಯ ಮೇರೆಗೆ ಕಲ್ಪಿಸುವಂತೆ ವಸತಿ ಇಲಾಖೆಗೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

By ETV Bharat Karnataka Team

Published : Oct 10, 2023, 9:26 PM IST

ಬೆಂಗಳೂರು : ಸ್ವಂತ ಸಂಪನ್ಮೂಲ ಕ್ರೋಢೀಕರಣಕ್ಕೆ ನೀತಿ, ಪ್ರಸ್ತಾವನೆಗೆ ವಸತಿ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಫ್‌ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದ ಮುಖ್ಯಮಂತ್ರಿಗಳು, ಅರಿವು ಸಾಲ ಯೋಜನೆಯಡಿ ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ನೀಡುವ ಸಾಲದ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸಂಖ್ಯೆ ಹೆಚ್ಚಳ ಹಾಗೂ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಮಾಣ ಹೆಚ್ಚಳ ಮಾಡಿರುವುದಕ್ಕೆ ಅನುಗುಣವಾಗಿ ಹೆಚ್ಚುವರಿ ಹುದ್ದೆಗಳ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ನಿಗದಿತ ಗುರಿಗೆ ಎದುರಾಗಿ ನಿರೀಕ್ಷೆಗೂ ಮೀರಿ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅರ್ಹ ಫಲಾನುಭವಿಗಳ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿ, ಅನುದಾನ ಲಭ್ಯತೆಗೆ ಅನುಸಾರವಾಗಿ ಸೌಲಭ್ಯ ವಿತರಿಸುವಂತೆ ಸೂಚಿಸಿದರು.

ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆ ರೂಪಿಸಿ, ಕಾಮಗಾರಿಗಳ ಆದ್ಯತಾ ಪಟ್ಟಿಯನ್ವಯ ಕೆಲಸ ಕೈಗೆತ್ತಿಕೊಳ್ಳುವಂತೆ ಸಲಹೆ ನೀಡಿದರು. ಅಲ್ಪಸಂಖ್ಯಾತರ ಇಲಾಖೆಯಡಿ ಆಯವ್ಯಯದಲ್ಲಿ ಘೋಷಿಸಲಾದ 19 ಘೋಷಣೆಗಳ ಪೈಕಿ 16 ಘೋಷಣೆಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಪ್ರಗತಿ ಕುಂಠಿತವಾಗಿರುವುದರಿಂದ ಸಂಪನ್ಮೂಲ ಕ್ರೋಢೀಕರಣ ಕುರಿತಂತೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಯಿತು. ಈ ಯೋಜನೆಯಡಿ ಫಲಾನುಭವಿಗಳಿಗೆ ವಂತಿಗೆ ಪ್ರಮಾಣ ಹೆಚ್ಚಾಗಿರುವುದರಿಂದ ಹಾಗೂ ಫಲಾನುಭವಿಗಳ ವಂತಿಗೆ ಪಾವತಿ ಹಿನ್ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಸಂಪನ್ಮೂಲ ಕ್ರೋಢೀಕರಣಕ್ಕೆ ನೀತಿ ರೂಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ಒಂದು ಲಕ್ಷ ವಸತಿ ಯೋಜನೆಯಡಿ ನಿರ್ಮಾಣಗೊಂಡ ಮನೆಗಳಿಗೆ ಅಗತ್ಯ ಮೂಲಸೌಕರ್ಯವನ್ನು ಆದ್ಯತೆಯ ಮೇರೆಗೆ ಕಲ್ಪಿಸುವಂತೆ ಸೂಚಿಸಿದರು. ಸಭೆಯಲ್ಲಿ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹ್ಮದ್‌ ಖಾನ್‌, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ, ಗೋವಿಂದರಾಜು ನಸೀರ್‌ ಅಹ್ಮದ್‌, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ ಅತೀಕ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾತಿ ಗಣತಿ ಸಮಾಜಕ್ಕೆ ಮಾರಕವಲ್ಲ: ನವೆಂಬರ್​ನಲ್ಲಿ ಜಾತಿ ಗಣತಿ ವರದಿ ಸರ್ಕಾರದ ಕೈ ಸೇರಬಹುದು. ಇದರಿಂದ ಯಾವ್ಯಾವ ಸಮುದಾಯ ಎಷ್ಟಿದೆ ಎಂಬ ಅಂಕಿ-ಅಂಶಗಳು ಗೊತ್ತಾಗಲಿದ್ದು, ಯೋಜನೆಗಳನ್ನು ಸಿದ್ಧಪಡಿಸಲು ಈ ಅಂಕಿ-ಅಂಶಗಳು ಸರ್ಕಾರಕ್ಕೆ ಬೇಕು. ಹಾಗಾಗಿ ಜಾತಿ ಗಣತಿ ಸಮಾಜಕ್ಕೆ ಮಾರಕವಲ್ಲ. ಸಮೀಕ್ಷೆಯು ಸಮಾಜವನ್ನು ವಿಭಜಿಸುವುದಿಲ್ಲ ಎಂದು (ಅಕ್ಟೋಬರ್ -7-2023) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು.

ಇದನ್ನೂ ಓದಿ:ಮೆರವಣಿಗೆ, ಮದುವೆ ಸಮಾರಂಭಗಳಲ್ಲಿ ಹಸಿರು ಪಟಾಕಿ ಸಿಡಿಸಲು ಮಾತ್ರ ಅವಕಾಶ: ಸಿಎಂ ಸಿದ್ದರಾಮಯ್ಯ

ABOUT THE AUTHOR

...view details