ಬೆಂಗಳೂರು: ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡು ಆ ಜಾಗದಲ್ಲಿ ದೊಡ್ಡ ದೊಡ್ಡ ಕಟ್ಟಡಗಳನ್ನು ನಿರ್ಮಿಸಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತೆರವುಗೊಳಿಸಲು ಮುಂದಾಗಬೇಕು. ಅಲ್ಲದೇ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬೆಂಗಳೂರು ನಗರದಲ್ಲಿ ಸರ್ಕಾರಿ ಜಮೀನುಗಳ ಒತ್ತುವರಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ.
ಪ್ರಸ್ತುತ ದಾಖಲಾಗಿರುವ ಪ್ರಕರಣ ಕೇವಲ ಟಿಪ್ ಆಫ್ ಐಸ್ ಬರ್ಗ್, ಇಂತಹ ನೂರಾರು ಪ್ರಕರಣಗಳಿದ್ದು, ಸರ್ಕಾರ ಅವುಗಳ ಬಗ್ಗೆ ಗಮನ ಹರಿಸಬೇಕು ಎಂದು ತಾಕೀತು ಮಾಡಿದೆ. ಜೊತೆಗೆ, ಸರ್ಕಾರ ಮತ್ತು ಬೆಂಗಳೂರು ಜಿಲ್ಲಾಧಿಕಾರಿಗೆ ಕ್ರಮ ಕೈಗೊಂಡಿರುವ ಬಗ್ಗೆ 4 ವಾರಗಳಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಕಳೆದ ಬಾರಿ ವಿಚಾರಣೆ ವೇಳೆ ನ್ಯಾಯಾಲಯ ನೀಡಿದ್ದ ನಿರ್ದೇಶನದಂತೆ 1.9 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಕಟ್ಟಡದ ಮಾಲೀಕರಿಗೆ ನಿಯಮದಂತೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ನೋಟಿಸ್ ನೀಡಲಾಗಿದೆ. ಆ ಕುರಿತು ಇನ್ನೂ ಪ್ರತಿವಾದಿಗಳು ಉತ್ತರ ನೀಡಿಲ್ಲ. ಪ್ರಕರಣದ ಎಲ್ಲ ಮಾಹಿತಿಯನ್ನು ವರದಿಯ ರೂಪದಲ್ಲಿ ಸಲ್ಲಿಸಲಾಗಿದೆ ಎಂದು ವಿವರಿಸಿದರು.