ಬೆಂಗಳೂರು: ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪುನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, ಈ ಕುರಿತು ಸ್ಪಷ್ಟ ಪ್ರಮಾಣ ಪತ್ರ ಸಲ್ಲಿಸುವಂತೆ ನಿರ್ದೇಶಿಸಿದೆ.
ದೇವಸ್ಥಾನ, ಮಸೀದಿ, ಚರ್ಚ್ ಸೇರಿದಂತೆ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ :ಈ ವೇಳೆ ಸರ್ಕಾರ ಸಲ್ಲಿಸಿದ್ದ ಪ್ರಮಾಣಪತ್ರ ಕಂಡು ಅಸಮಾಧಾನ ವ್ಯಕ್ತಪಡಿಸಿದ ಪೀಠ, ಸರ್ಕಾರ ಹಾಗೂ ಬಿಬಿಎಂಪಿಗೆ ತರಾಟೆಗೆ ತೆಗೆದುಕೊಂಡಿತು. ನೀವು ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನೇ ಸರಿಯಾಗಿ ಅರ್ಥೈಸಿಕೊಂಡಿಲ್ಲ. 2009 ರ ಸಪ್ಟೆಂಬರ್ 29ರ ಬಳಿಕ ನಿರ್ಮಾಣವಾಗಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡುವಂತೆ ಸುಪ್ರೀಂಕೋರ್ಟ್ ಹೇಳಿದೆ. ಅದಕ್ಕಿಂತ ಹಿಂದೆ ಅನಧಿೃತವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡುವ ಸಂಬಂಧ ಸರ್ಕಾರಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶಿಸಿದೆ. ಆದರೆ, ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ 2009 ರ ನಂತರದ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡುವ ಕುರಿತು ಆದೇಶ ಹೊರಡಿಸಿದ್ದಾರೆ. ಅದರಲ್ಲೂ ಸುಪ್ರೀಂ ಕೋರ್ಟ್ 2009ರ ಸೆಪ್ಟೆಂಬರ್ 29 ರಿಂದ ಎಂದು ಹೇಳಿದ್ದರೂ, ಸರ್ಕಾರ 2 ತಿಂಗಳು ಮುಂದಕ್ಕೆ ದಿನಾಂಕ ನಿಗದಿ ಮಾಡಿಕೊಂಡು ಡಿಸೆಂಬರ್ 27ರಿಂದ ಎಂದು ಆದೇಶ ಹೊರಡಿಸಿದೆ. ಇಂತಹ ನಿರ್ಲಕ್ಷ್ಯ ನ್ಯಾಯಾಲಯಕ್ಕೆ ತೋರುವ ಅಗೌರವ ಎಂದು ಸರ್ಕಾರದ ವಿರುದ್ಧ ಪೀಠ ಅಸಮಾಧಾನ ವ್ಯಕ್ತಪಡಿಸಿತು.