ನವದೆಹಲಿ/ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.
ಸಂಸತ್ ಭವನದಲ್ಲಿ 15 ನಿಮಿಷಗಳ ಕಾಲ ನಡೆದ ಮಾತುಕತೆಯಲ್ಲಿ ರಾಜ್ಯದ ಪರವಾಗಿ ಅನೇಕ ಮನವಿಗಳನ್ನು ಪ್ರಧಾನಿಗಳ ಮುಂದಿಟ್ಟಿದ್ದಾರೆ. ರಾಷ್ಟ್ರೀಯ ವಿಪತ್ತು ನಿಧಿಯಿಂದ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಪ್ರಧಾನಿ ಬಳಿ ಮನವಿ ಮಾಡಿದ್ದಾರೆ. ಅಲ್ಲದೆ ರಾಜ್ಯ ಹಾಗೂ ರಾಷ್ಟ್ರೀಯ ವಿಪತ್ತು ನಿಧಿ ಬಳಕೆಯ ಮೇಲಿನ ನಿಯಮಾವಳಿ ಮತ್ತು ಮಾನದಂಡವನ್ನು ಪರಿಷ್ಕರಿಸುವಂತೆ ಮನವಿ ಮಾಡಿದರು.
ವಿಪತ್ತಿನಿಂದ ತೊಂದರೆಗೀಡಾದ ಜನರಿಗೆ ಸಕಾಲಕ್ಕೆ ಸರಿಯಾಗಿ ಸಮರ್ಪಕ ರೀತಿಯಲ್ಲಿ ತ್ವರಿತವಾಗಿ ಆರ್ಥಿಕ ನೆರವನ್ನು ನೀಡಲು ಇದು ಸಹಕಾರಿಯಾಗಲಿದೆ ಎಂದು ಮನವಿ ಮಾಡಿದರು. ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಹಾಗೂ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಗಳಾಗಿ ಘೋಷಣೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು.
ರಾಜ್ಯಕ್ಕೆ ಹಂಚಿಕೆಯಾಗಿರುವ ನೀರನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಲು ಅವಕಾಶ ಕಲ್ಪಿಸಬೇಕು ಮೇಕೆದಾಟು, ಕಳಸಾ-ಬಂಡೂರಿ ನಾಲಾ ಯೋಜನೆ ಸೇರಿದಂತೆ ರಾಜ್ಯದ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಶೀಘ್ರವಾಗಿ ಅನುಮೋದನೆ ಹಾಗೂ ಅನುಮತಿ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿದ್ದಾರೆ.
ಇದೇ ವೇಳೆ ನವೆಂಬರ್ 19ರಂದು ನಡೆಯಲಿರುವ ಬೆಂಗಳೂರು ಟೆಕ್ ಶೃಂಗಸಭೆಯನ್ನು ವರ್ಚುವಲ್ ಮೂಲಕ ಉದ್ಘಾಟನೆ ಮಾಡಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಬಿಎಸ್ವೈ ಆಹ್ವಾನ ನೀಡಿದರು.