ಬೆಂಗಳೂರು: ಕೊಡಗಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳಿಗೆ ಮುಂದಾಗದೇ ಅಭಿಪ್ರಾಯಗಳೊಂದಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿ ಎಂದು ಕರೆ ನೀಡಿದ್ದಾರೆ.
ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿದ್ದು, ಆ ಸ್ಥಾನಕ್ಕೆ ತನ್ನದೇ ಆದ ಗೌರವ ಇರುತ್ತದೆ. ಯಾವುದೇ ವಿಷಯದ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಲವಾದ ಅಭಿಪ್ರಾಯಗಳೊಂದಿಗೆ ವಿರೋಧಿಸಬೇಕು. ಯಾವುದೇ ದೈಹಿಕ ಕಾರ್ಯದಿಂದಲ್ಲ, ಇದನ್ನು ಎಲ್ಲರೂ ಪಾಲಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ: ಘಟನೆ ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
ಏನಿದು ಘಟನೆ: ಕೊಡಗು ಜಿಲ್ಲಾ ಪ್ರವಾಸ ಹಾಗೂ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಲು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂಚರಿಸುತ್ತಿದ್ದಾಗ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ, ಕಾರಿನ ಮೇಲೆ ಮೊಟ್ಟೆ ಎಸೆದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಮಾಡಬೇಕಾಯಿತು.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಕಾರ್ಯಕರ್ತರ ಅತಿರೇಕದ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, 'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಮೊಟ್ಟೆ ಎಸೆಯುವ ಗೂಂಡಾಗಿರಿಯ ರಾಜಕೀಯ ಶುರು ಮಾಡಬೇಡಿ. ಅದನ್ನು ಅಂತ್ಯ ಮಾಡುವುದು ಹೇಗೆ ಎಂದು ನಮಗೂ ಗೊತ್ತು. ನಮ್ಮ ಕಾರ್ಯಕರ್ತರು ನಿಮ್ಮವರಂತೆಯೇ ಬೀದಿಗಿಳಿದರೆ ನೀವು ಮನೆಯಿಂದ ಹೊರಬರುವುದು ಕೂಡ ಕಷ್ಟವಾಗಬಹುದು. ಯು.ಪಿ ಮಾದರಿ ಎಂದರೆ ಇದೆನಾ? ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಬಿಜೆಪಿಗರಿಂದ ಮೊಟ್ಟೆ ಎಸೆತ, ಕಪ್ಪು ಬಾವುಟ ಪ್ರದರ್ಶನ
ಕಠಿಣ ಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ: ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿರುವುದನ್ನ ಖಂಡಿಸಿ, ಮೈಸೂರು ಸೇರಿದಂತೆ ಅನೇಕ ಕಡೆ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಬಿಜೆಪಿ ಕಿಡಿಗೇಡಿಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ, ಮುಖ್ಯಮಂತ್ರಿ ಹೋದಲೆಲ್ಲಾ ಮೊಟ್ಟೆ, ಸಗಣಿಯಲ್ಲಿ ಹೊಡೆಯುತ್ತೇವೆ. ರಾಜ್ಯದಲ್ಲಿ ಗೌರವವಾಗಿ ನಡೆದುಕೊಳ್ಳುವ ಕೆಲಸ ಮಾಡಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.
ಇದನ್ನೂ ಓದಿ:ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಸರಿಯಲ್ಲ, ಆದರೆ... : ಪ್ರತಾಪ್ ಸಿಂಹ