ಬೆಂಗಳೂರು:ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಸುಧಾರಣೆ ಮತ್ತು ಕಡಿಮೆ ದರದಲ್ಲಿ ಎಲ್ಲರಿಗೂ ವೈದ್ಯಕೀಯ ಶಿಕ್ಷಣ ದೊರೆಯುವ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದಾರೆ.
ರಷ್ಯಾ ಉಕ್ರೇನ್ ನಡುವಿನ ಯುದ್ದದಲ್ಲಿ ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳು ಹೆಚ್ಚು ಸಿಲುಕಿಕೊಂಡಿರುವ ನಡುವೆಯೇ ಸಿಎಂ ಬೊಮ್ಮಾಯಿ ಈ ಮಹತ್ವದ ಸಭೆ ನಡೆಸಿದ್ದಾರೆ. ಆ ವಿದ್ಯಾರ್ಥಿಗಳೆಲ್ಲ ಕಡಿಮೆ ಶುಲ್ಕಕ್ಕೆ ವೈದ್ಯಕೀಯ ಶಿಕ್ಷಣ ಸಿಗಲಿದೆ ಎಂದು ಉಕ್ರೇನ್ಗೆ ಹೋದವರಾಗಿದ್ದಾರೆ. ಹಾಗಾಗಿ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಸುಧಾರಣೆಯಾದಲ್ಲಿ ಇಂತಹ ವಲಸೆ ತಪ್ಪಿಸಬಹುದು ಎನ್ನುವ ಚಿಂತನೆಯೊಂದಿಗೆ ಸಿಎಂ ಸಭೆ ನಡೆಸಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಕಳೆದ ಏಳು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಗುಣಾತ್ಮಕ ಬದಲಾವಣೆ ತಂದಿದೆ. ರಾಜ್ಯದಲ್ಲಿ ಕಳೆದ ಎರಡು ವರ್ಷದ ಬಿಜೆಪಿ ಸರ್ಕಾರದ ಅವಧಿಯಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಹಲವಾರು ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.