ಬೆಂಗಳೂರು: ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ನಂತರ ಮೊದಲ ಬಾರಿ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರ ಭೇಟಿ ಮಾಡಿ ವಾಪಸ್ ಆದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಬೆಳಗ್ಗೆಯೇ ಯಡಿಯೂರಪ್ಪ ಮನೆಗೆ ಸಿಎಂ ಬೊಮ್ಮಾಯಿ ಭೇಟಿ: ಬೆಳಗ್ಗೆಯೇ ಆರ್.ಟಿ ನಗರ ಖಾಸಗಿ ನಿವಾಸದಿಂದ ಹೊರಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರೇಸ್ ಕೋರ್ಸ್ ನಿವಾಸಕ್ಕೆ ತೆರಳುವ ಮುನ್ನವೇ ಮಾಜಿ ಸಿಎಂ ಬಿಎಸ್ವೈ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿದರು. ಯಡಿಯೂರಪ್ಪ ಜೊತೆ ಕೆಲಕಾಲ ಮಾತುಕತೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಯಡಿಯೂರಪ್ಪ ಚರ್ಚೆ ನಡೆಸಿದ್ದರು. ಆ ಹಿನ್ನೆಲೆಯಲ್ಲಿ ಯಡಿಯೂರಪ್ಪ ಜೊತೆ ಸಿಎಂ ಮಾತುಕತೆ ನಡೆಸಿ ಹೈಕಮಾಂಡ್ ನೀಡಿದ ಸಂದೇಶಗಳು, ಅಭಿಪ್ರಾಯಗಳ ಕುರಿತು ಸಮಾಲೋಚನೆ ನಡೆಸಿದರು.