ಬೆಂಗಳೂರು :ರಾಜಧಾನಿ ಬೆಂಗಳೂರು ನಗರವನ್ನು ಮಾದರಿ ನಗರವನ್ನಾಗಿ ಮೇಲ್ದರ್ಜೆಗೆ ಏರಿಸಲು ಅಗತ್ಯ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ತಿಳಿಸಿದರು.
ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಸ್ಮಾರ್ಟ್ ಸಿಟಿ ಯೋಜನೆಯಲ್ಲದೆ, ನಗರೋತ್ಥಾನ, ಬಿಬಿಎಂಪಿ ಹಾಗೂ ಇತರೆ ಇಲಾಖೆಗಳ ಸಹಭಾಗಿತ್ವದಲ್ಲಿ ಮೂಲಸೌಕರ್ಯಗಳನ್ನು ಕಲ್ಪಿಸಿ ಬೆಂಗಳೂರನ್ನು ಮಾದರಿ ನಗರವನ್ನಾಗಿ ಮಾಡಲು ಸರ್ಕಾರ ಸಿದ್ದವಿದೆ ಎಂದು ಹೇಳಿದರು.
ನಗರದ ಎರಡು ಪ್ರಮುಖ ಕಣಿವೆಗಳನ್ನು ಮಳೆ ಅನಾಹುತವಾದ ಸಂದರ್ಭದಲ್ಲಿ ಪರಿಶೀಲನೆ ನಡೆಸಿದ್ದು, 500 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರೀಟ್ ನಿರ್ಮಾಣ ಮಾಡಲು ವಿಸ್ತೃತ ಯೋಜನಾ ವರದಿ ಸಿದ್ದಪಡಿಸಲಾಗಿದೆ. ಬೆಂಗಳೂರು ಸ್ಮಾಟ್‍ಸಿಟಿ ಲಿಮಿಟೆಡ್‍ಗೆ ಒಂದು ಸಾವಿರ ಕೋಟಿ ರೂ. ಅನುದಾನ ಒದಗಿಸಲಾಗಿತ್ತು. ಎಲ್ಲ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವುದಾಗಿ ತಿಳಿಸಿದರು.
ಬೆಂಗಳೂರು ನಗರವು ಸ್ಮಾರ್ಟ್ ಸಿಟಿ ಯೋಜನೆಯ 3ನೇ ಸುತ್ತಿನಲ್ಲಿ ಆಯ್ಕೆಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶೇ.50ರಷ್ಟು ಅನುದಾನ ಒದಗಿಸಲಿವೆ ಎಂದು ಹೇಳಿದರು. ನವೆಂಬರ್‌ವರೆಗೆ ಕೇಂದ್ರ ಸರ್ಕಾರದಿಂದ 243 ಕೋಟಿ ರೂ., ರಾಜ್ಯ ಸರ್ಕಾರದಿಂದ 250 ಕೋಟಿ ರೂ. ಸೇರಿದಂತೆ ಒಟ್ಟು 493 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಅದರಲ್ಲೀಗ 414 ಕೋಟಿ ರೂ. ಖರ್ಚಾಗಿದೆ.
ಬೆಂಗಳೂರು ನಗರದ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 904.83 ಕೋಟಿ ರೂ. ಅಂದಾಜು ವೆಚ್ಚದಲ್ಲಿ 38 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹತ್ತು ಕಾಮಗಾರಿಗಳು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳ್ಳುತ್ತವೆ. 96.65 ಕೋಟಿ ಮೌಲ್ಯದ 8 ಕಾಮಗಾರಿಗಳು ಹಾಗೂ 26.34 ಕೋಟಿ ರೂ. ಮೊತ್ತದ ಒಂದು ರಸ್ತೆ ಕಾಮಗಾರಿಯು ಪೂರ್ಣಗೊಂಡಿದೆ. 550 ಕೋಟಿ ರೂ. ವೆಚ್ಚದಲ್ಲಿ 16 ರಸ್ತೆ ಕಾಮಗಾರಿಗಳು ಕೈಗೊಳ್ಳಲಾಗಿದೆ. 60 ಕೋಟಿ ರೂ. ವೆಚ್ಚದಲ್ಲಿ ಕೆ.ಆರ್.ಮಾರುಕಟ್ಟೆ ಅಭಿವೃದ್ಧಿ, ಕಬ್ಬನ್‍ಪಾರ್ಕ್, ಎಲೆಕ್ಟ್ರಿಕ್ ಬಸ್‍ಗಳು ಕೂಡ ಈ ಯೋಜನೆ ವ್ಯಾಪ್ತಿಯಲ್ಲಿ ಸೇರಿವೆ ಎಂದು ವಿವರಿಸಿದರು.